ಜೆಡಿಎಸ್‍ನಿಂದ ಸ್ಪರ್ಧೆ ಮಾಡುವ ಬಗ್ಗೆ ಮುನಿರತ್ನ ಸ್ಪಷ್ಟನೆ
ಆರ್.ಆರ್.ನಗರ ಉಪ ಚುನಾವಣೆ

ಬೆಂಗಳೂರು, ಅ.6: ಆರ್.ಆರ್.ನಗರ ವಿಧಾನಸಭಾಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್‍ನಿಂದ ಸ್ಪರ್ಧೆ ಮಾಡುವ ಯಾವುದೇ ಚಿಂತನೆ ಇಲ್ಲ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್ ಸಿಗದೇ ಇದ್ದಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಲು ಮುನಿರತ್ನ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುವ ವರದಿಗಳು ಸತ್ಯಕ್ಕೆ ದೂರವಾಗಿವೆ. ಅಂತಹ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದರು.
ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಹಾಗೂ ನನ್ನ ಹೆಸರನ್ನು ಬಿಜೆಪಿ ಕೋರ್ ಕಮಿಟಿ ಸಭೆ ಹೈಕಮಾಂಡ್‍ಗೆ ಕಳಿಸಿಕೊಟ್ಟಿದೆ. ಆದರೆ ಬಿಜೆಪಿಯಿಂದ ಟಿಕೆಟ್ ಸಿಗುವ ವಿಶ್ವಾಸವಿದೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
Next Story





