ಡೆಲ್ಲಿಗೆ ಸೋಲುಣಿಸಿದ ರೋಹಿತ್ ಬಳಗ: ಮತ್ತೆ ಅಗ್ರಸ್ಥಾನಕ್ಕೆ ಲಗ್ಗೆ ಇಟ್ಟ ಮುಂಬೈ ಇಂಡಿಯನ್ಸ್

ಅಬುಧಾಬಿ: ಕ್ವಿಂಟಾನ್ ಡಿಕಾಕ್ ಮತ್ತು ಸೂರ್ಯಕುಮಾರ್ ಯಾದವ್ ಬಾರಿಸಿದ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿದೆ.
ಗೆಲುವಿಗೆ 163 ರನ್ ಗುರಿ ಪಡೆದ ಮುಂಬೈ ಇಂಡಿಯನ್ಸ್ ನಿಗದಿತ 19.4 ಓವರ್ ಗಳಲ್ಲಿ ಗೆಲುವಿನ ಗುರಿ ತಲುಪಿತು. ಆರಂಭಿಕ ಆಟಗಾರ ಕ್ವಿಂಟಾನ್ ಡಿಕಾಕ್ 36 ಎಸೆತಗಳಲ್ಲಿ 53 ರನ್ ಹಾಗೂ ಸೂರ್ಯಕುಮಾರ್ ಯಾದವ್ 32 ಎಸೆತಗಳಲ್ಲಿ 53 ರನ್ ಬಾರಿಸಿದರು. ಇಶಾನ್ ಕಿಶಾನ್ 15 ಎಸೆತಗಳಲ್ಲಿ 28 ರನ್ ಸಿಡಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಕಾಗಿಸೋ ರಬಾಡ 2 ವಿಕೆಟ್ ಪಡೆದರು.
ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಮತ್ತೆ ಅಗ್ರಸ್ಥಾನಕ್ಕೆ ಲಗ್ಗೆ ಇಟ್ಟಿತು. ಒಟ್ಟು 7 ಪಂದ್ಯಗಳನ್ನಾಡಿರುವ ಮುಂಬೈ ಐದರಲ್ಲಿ ಗೆಲುವು ಸಾಧಿಸಿದೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕೂಡಾ 7 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಎರಡು ಪಂದ್ಯಗಳನ್ನು ಸೋತಿದೆ.
ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು.







