'ದೀಪಾವಳಿ'ಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ
ಇಲ್ಲಿವೆ ಪಟಾಕಿ ಮಾರಾಟಗಾರರು ಪಾಲಿಸಬೇಕಾದ ನಿಯಮಗಳು

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.14: ದೀಪಾವಳಿ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದೆಂದು ರಾಜ್ಯ ಸರಕಾರ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಆದೇಶಿದ್ದಾರೆ.
ಈ ಕುರಿತು ರಾಜ್ಯದ ಜನತೆಗೆ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಅವರು, ಪಟಾಕಿ ಮಾರಾಟದ ಮಳಿಗೆಗಳನ್ನು ನ.1ರಿಂದ 17ರವರೆಗೆ ಮಾತ್ರ ತೆರೆದಿರಬೇಕು. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರ ನೀಡಿರುವ ಪರವಾನಿಗೆಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಬೇಕೆಂದು ಸೂಚಿಸಲಾಗಿದೆ.
ಪಟಾಕಿ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು. ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು, ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಜಾಗ್ರತೆ ವಹಿಸಬೇಕೆಂದು ತಿಳಿಸಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರು ಅರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಹಾಗೂ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.







