ಕುಸುಮಾ ಮೇಲೆ ಎಫ್‍ಐಆರ್ ದಾಖಲು ರಾಜ್ಯ ಸರಕಾರದ ಲಜ್ಜೆಗೆಟ್ಟ ಕ್ರಮ: ಚೆಲುವರಾಯಸ್ವಾಮಿ
ಬೆಂಗಳೂರು, ಅ.15: ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮೇಲೆ ಎಫ್‍ಐಆರ್ ದಾಖಲಿಸಿರುವುದು ರಾಜ್ಯ ಸರಕಾರದ ಲಜ್ಜೆಗೆಟ್ಟ ಕ್ರಮವಾಗಿದೆ ಎಂದು ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮೇಲೆ ಈಗ ಒಂದು ಕೇಸ್ ಹಾಕಲಾಗಿದೆ. ರಾಜ್ಯ ಸರಕಾರ ಇನ್ನು ಮುಂದೆ ಅವರು ಕೆಮ್ಮಿದರು, ಸೀನಿದರು ಪ್ರಕರಣ ದಾಖಲಿಸಬಹುದೆಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸರಕಾರ ಎಲ್ಲ ರಂಗದಲ್ಲೂ ಹಾಗೂ ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಉಪಚುನಾವಣೆಯ ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗಿ ಜನರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದರ ಬಗ್ಗೆ ಕಾಳಜಿ ವಹಿಸಿ, ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾದ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರು ಜಾಣ ಮೌನ ವಹಿಸಿರುವುದು ದುರದೃಷ್ಟಕರ. ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.







