ಆರ್.ಆರ್.ನಗರ, ಶಿರಾ ಉಪಚುನಾವಣೆಗಳಲ್ಲಿ ಈಗಾಗಲೇ ಬಿಜೆಪಿ ಗೆದ್ದಾಗಿದೆ: ಯಡಿಯೂರಪ್ಪ

ಮೈಸೂರು,ಅ.16: ಬೆಂಗಳೂರಿನ ರಾಜರಾಜೇಶ್ವರಿನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಈಗಾಗಲೇ ಬಿಜೆಪಿ ಗೆದ್ದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಾಳೆ ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ಮೈಸೂರಿಗೆ ಶುಕ್ರವಾರ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದಾಗಿದೆ. ಆದರೆ ದೊಡ್ಡಮಟ್ಟದಲ್ಲಿ ಗೆಲ್ಲಬೇಕು ಎಂಬುದು ನಮ್ಮ ಗುರಿ. ಎರಡೂ ಕ್ಷೇತ್ರಗಳಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೊರೋನ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆ ಮಾಡಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ಕೊರೋನ ಪರಿಸ್ಥಿತಿ ಅರ್ಥಮಾಡಿಕೊಂಡು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರಿಹಾರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ಹೆಚ್ಚಿನ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ಹೇಳಿದರು.







