ಕೋಲಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಿಸಲು ಕೋರಿ ಅರ್ಜಿ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಅ.16: ಶಿಥಿಲಗೊಂಡಿರುವ ಕೋಲಾರ ಜಿಲ್ಲಾ ಕೋರ್ಟ್ ಸಂಕೀರ್ಣವನ್ನು ಹೊಸದಾಗಿ ನಿರ್ಮಿಸಲು ಕೋರಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯದಾನ ವ್ಯವಸ್ಥೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸರಕಾರದ ಸಾಂವಿಧಾನಿಕ ಕರ್ತವ್ಯ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಸಂಬಂಧ ಮಾಹಿತಿ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಕೋಲಾರದ ಜಿಲ್ಲಾ ಕೋರ್ಟ್ ಸಂಕೀರ್ಣ ಶಿಥಿಲವಾಗಿದ್ದು, ಅದನ್ನು ಹೊಸದಾಗಿ ನಿರ್ಮಿಸಲು ಸಂಬಂಧಿಸಿದ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸ್ಥಳೀಯ ನಿವಾಸಿಗಳಾದ ವೆಂಕಟಾಚಲಗೌಡ ಮತ್ತಿಬ್ಬರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರಾದ ಎಂ. ಶಿವಪ್ರಕಾಶ್ ವಾದಿಸಿ, ಕೋಲಾರ ಜಿಲ್ಲಾ ಕೋರ್ಟ್ ಸಂಕೀರ್ಣ ಬಹುತೇಕ ಶಿಥಿಲಾವಸ್ಥೆ ತಲುಪಿದೆ. ಕಟ್ಟಡದ ಮೇಲ್ಚಾವಣಿ ಹಾಳಾಗಿದ್ದು ಪದೇ ಪದೇ ದುರಸ್ತಿ ಮಾಡಿಸಲಾಗುತ್ತಿದೆ. ಹಾಗಿದ್ದೂ ಮಳೆ ಹೆಚ್ಚಾದಾಗ ನೀರು ಸೋರುತ್ತಿದೆ. ಇನ್ನು ಕಟ್ಟಡದಲ್ಲಿ ಅಗತ್ಯ ಮೂಲ ಸೌಕರ್ಯಗಳಿಲ್ಲ. ಇದರಿಂದಾಗಿ ಕೋರ್ಟ್‍ಗೆ ಬರುವ ಕಕ್ಷೀದಾರರಿಗೂ ಸಮಸ್ಯೆಯಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ, ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿಗೊಳಿಸಿತು.







