ಕುಸುಮಾ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಡಿ.ಕೆ.ಶಿವಕುಮಾರ್ ಕರೆ
ರಾಜರಾಜೇಶ್ವರಿ ನಗರ ಉಪಚುನಾವಣೆ

ಬೆಂಗಳೂರು, ಅ.19: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಗೆಲುವಿಗಾಗಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನು ಶ್ರಮಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ಸೋಮವಾರ ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಮುಖಂಡ ಬಿ.ಎಚ್.ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಒಬ್ಬ ಉತ್ತಮ ಯುವ ವಿದ್ಯಾವಂತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕ್ಷೇತ್ರದಲ್ಲಿ ಅವರನ್ನು ಕುರಿತು ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಅವರ ಗೆಲುವಿಗೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಅವರು ಹೇಳಿದರು.
ಜಾತ್ಯತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಪಕ್ಷ. ಸಮಾಜದ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುತ್ತಿದೆ. ಬೇರೆ ಪಕ್ಷದವರು ನಮ್ಮ ಬಗ್ಗೆ ಏನೇ ಟೀಕೆಗಳನ್ನು ಮಾಡಿದರೂ ನಾವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷದ ಸಿದ್ಧಾಂತ ಹಾಗೂ ಅಭ್ಯರ್ಥಿಯನ್ನು ಮುಂದಿಟ್ಟುಕೊಂಡು ಮತದಾರರ ವಿಶ್ವಾಸಗಳಿಸೋಣ ಎಂದು ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮಾತನಾಡಿ, ಯುವಕರು, ಮಹಿಳೆಯರ ಪ್ರತಿನಿಧಿಯಾಗಿ, ಅವರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಯುವಕರು, ಮಹಿಳೆಯರು ತಮ್ಮ ಶಕ್ತಿ ಹಾಗೂ ಸಾಮರ್ಥ್ಯವನ್ನು ತೋರಿಸುವ ಸಮಯ ಬಂದಿದೆ. ನಿಮ್ಮ ಮನೆಯ ಮಗಳಾಗಿ ಕೆಲಸ ಮಾಡುತ್ತೇನೆ. ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಂತಹ ಯಾವುದೆ ಕೆಲಸವನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಸಿದ್ದರಾಜು ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕಿ ಸೌಮ್ಯ ರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್, ಮುಖಂಡ ಹನುಮಂತರಾಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.






.jpg)
.jpg)

