ಭಾರೀ ಮಳೆ, ಪ್ರವಾಹ: ಹೆಚ್ಚಿನ ನೆರವು ಕೋರಿ ಕೇಂದ್ರಕ್ಕೆ ಮನವಿ- ಸಿಎಂ ಯಡಿಯೂರಪ್ಪ

ಬೆಂಗಳೂರು, ಅ. 22: ಕಲಬುರಗಿ, ಯಾದಗಿರಿ, ವಿಜಯಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಳೆದ ಸಾಲಿಗಿಂತ ಈ ಬಾರಿ ಹೆಚ್ಚಿನ ಹಾನಿ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹೆಚ್ಚಿನ ನೆರವು ನೀಡಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯಷ್ಟೇ ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿವಿಧ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದು, ಅಲ್ಲಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ನಷ್ಟದ ಅಂದಾಜು ವರದಿ ನೀಡಲು ಸೂಚನೆ ನೀಡಲಾಗಿದೆ ಎಂದರು.
ನೂರಾರು ಗ್ರಾಮಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಹೆಚ್ಚಿನ ನೆರವು ನೀಡುವಂತೆ ಕೇಂದ್ರಕ್ಕೆ ಈಗಾಗಲೇ ಮನವಿ ಮಾಡಲಾಗಿದೆ ಎಂದ ಯಡಿಯೂರಪ್ಪ, ಮನೆ ಕಳೆದುಕೊಂಡಿರುವ ನೆರೆ ಸಂತ್ರಸ್ತರಿಗೆ ಈಗಾಗಲೇ ತಲಾ 10 ಸಾವಿರ ರೂ.ಪರಿಹಾರ ನೀಡಲು ಆರಂಭಿಸಿದೆ. ಈ ಹಿಂದೆ ನೀಡಿದಂತೆ ಮನೆ ಪುನರ್ ನಿರ್ಮಾಣಕ್ಕೆ 5 ಲಕ್ಷ ರೂ.ನೀಡಲು ನಿರ್ಧರಿಸಲಾಗಿದೆ ಎಂದರು.
ಶೇ.75ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿಗೆ 'ಎ' 5 ಲಕ್ಷ ರೂ., ಶೇ.25ರಿಂದ 75ರಷ್ಟು ಭಾಗಶಃ ಮನೆ ಹಾನಿಗೆ 'ಬಿ' 5 ಲಕ್ಷ ರೂ., ಶೇ.25ರಿಂದ 75ರಷ್ಟು ಮನೆ ಹಾನಿ ಭಾಗಶಃ ಹಾನಿ `ಸಿ' ದುರಸ್ತಿಗೆ 3 ಲಕ್ಷ ರೂ. ಹಾಗೂ ಶೇ.15ರಿಂದ 25ರಷ್ಟು ಅಲ್ಪ ಹಾನಿಗೆ `ಡಿ' 50 ಸಾವಿರ ರೂ.ನೆರವು ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.
ಈಗಾಗಲೇ ರಾಜ್ಯ ಸರಕಾರ ನೆರೆ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ನಡೆಸುತ್ತಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುತ್ತಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹೆಚ್ಚಿನ ನೆರವು ನೀಡಬೇಕಾಗಿದೆ. ನಷ್ಟದ ಸಂಪೂರ್ಣ ವರದಿ ಬಂದ ಕೂಡಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದ ಯಡಿಯೂರಪ್ಪ, ಸಂತ್ರಸ್ತರಿಗೆ ನೆರವಿಗೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಸಚಿವರ ವಿರುದ್ಧ ಸಿಎಂ ಗರಂ
ಸರಕಾರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ನಿರೀಕ್ಷೆಯಂತೆ ಕಾರ್ಯ ನಿರ್ವಹಿಸುತ್ತಿಲ್ಲ. ನಮ್ಮ ಶಾಸಕರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಚಿವ ಸಂಪುಟ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಕೊರೋನ ಸೋಂಕು, ಮಳೆ ಮತ್ತು ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿಯೂ ಸಚಿವರು ಅಸಡ್ಡೆ ತೋರಿಸಿದ್ದು, ಶಾಸಕರೂ ಕ್ಷೇತ್ರದ ಜನರ ನೆರವಿಗೆ ಧಾವಿಸಿಲ್ಲ. ಜೊತೆಗೆ ಕೆಲವರು ಸರಕಾರದ ವಿರುದ್ಧ ನೇರ ಹೇಳಿಕೆಗಳನ್ನು ನೀಡುತ್ತಿರುವುದು ವಿಪಕ್ಷಗಳಿಗೆ ಆಹಾರವಾಗುತ್ತಿದೆ. ಪಕ್ಷಕ್ಕೆ ತೀವ್ರ ಮುಜುಗರ ಸೃಷ್ಟಿಸುತ್ತಿದ್ದರೂ ಮೌನ ವಹಿಸಿದರೆ ಮುಂದಿನ ದಿನಗಳಲ್ಲಿ ಗಂಭೀರ ಪರಿಸ್ಥಿತಿ ಎದುರಿಸಬೇಕಾಗುತ್ತದೆ' ಎಂದು ಯತ್ನಾಳ್ ಹೇಳಿಕೆ ಕುರಿತು ಸಿಎಂ, ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.







