ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು, ಅ. 30: ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆ ಬಳಿಕ ಹೊಸದಿಲ್ಲಿ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ಶಿರಾ ಕ್ಷೇತ್ರದ ಪ್ರಚಾರಕ್ಕೆ ತೆರಳುವ ಮುನ್ನ ಇಲ್ಲಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಮುಗಿದ ನಂತರ ದಿಲ್ಲಿ ತೆರಳಲಿದ್ದು, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ. ಉಪಚುನಾವಣೆ ಬಳಿಕ ಸಂಪುಟ ವಿಸ್ತರಣೆ ನಿಶ್ಚಿತ ಎಂದರು.
ಕಳೆದ ತಿಂಗಳೇ ಸಚಿವ ಸಂಪುಟ ವಿಸ್ತರಣೆ ಮಾಡಲು ಉದ್ದೇಶಿಸಿದ್ದೆ. ಆದರೆ ಉಪಚುನಾವಣೆಗಳು ಬಂದ ಕಾರಣ ಸಂಪುಟ ವಿಸ್ತರಣೆ ಮುಂದೂಡಲಾಯಿತು. ಈ ಬಾರಿ ಸಂಪುಟ ವಿಸ್ತರಣೆ ಮುಂದೂಡುವುದಿಲ್ಲ ಎಂದು ಯಡಿಯೂರಪ್ಪ ಇದೇ ವೇಳೆ ಸ್ಪಷ್ಟನೆ ನೀಡಿದರು.
ಹೋಗದಿದ್ದರೆ ತಪ್ಪಾಗುತ್ತದೆ: ನಾನು ಉಪ ಚುನಾವಣೆ ಪ್ರಚಾರಕ್ಕೆ ತೆರಳುವ ಆಲೋಚನೆ ಇರಲಿಲ್ಲ. ಆದರೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಎಲ್ಲ ಪ್ರಚಾರಕ್ಕೆ ತೆರಳಿದ್ದು, ನಾನು ಪ್ರಚಾರಕ್ಕೆ ಹೋಗದಿದ್ದರೆ ತಪ್ಪಾಗುತ್ತದೆ. ಹೀಗಾಗಿ ಉಪ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದೇನೆ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.







