ವಾರಾಂತ್ಯದಲ್ಲಿ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು, ನ.4: ನಗರದ ಪ್ರಮುಖ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ವಾರಾಂತ್ಯದಲ್ಲಿ ವಾಹನ ಸಂಚಾರ ಬಂದ್ ಮಾಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಿಡಿಸಿದ್ದಾರೆ.
ನ.7 ರಿಂದ 2021ರ ಫೆಬ್ರವರಿ 28ರವರೆಗೆ ಪ್ರತಿ ಶನಿವಾರ ಮತ್ತು ರವಿವಾರ ಚರ್ಚ್ ಸ್ಟ್ರೀಟ್‍ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಕೇವಲ ಪಾದಚಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕಾಗಿ ಚರ್ಚ್ ಸ್ಟ್ರೀಟ್ ರಸ್ತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನು, ಯೋಜನೆ ಬಗ್ಗೆ ನಗರ ಭೂಸಾರಿಗೆ ನಿರ್ದೇಶನಾಲಯ ಪ್ರಸ್ತಾವನೆ ನೀಡಿದೆ. ಇದರನ್ವಯ ಪ್ರಸ್ತಾವನೆಗೆ ಅಂಗೀಕಾರ ನೀಡಿ ಕಮಲ್ ಪಂತ್ ಅನುಮತಿ ನೀಡಿದ್ದಾರೆ. ಹೀಗಾಗಿ, ಚರ್ಚ್ ಸ್ಟ್ರೀಟ್‍ನಲ್ಲಿ ವಾರಾಂತ್ಯದ ಎರಡು ದಿನಗಳು ವಾಹನ ಸಂಚಾರಕ್ಕೆ ನಿಬರ್ಂಧ ಹೇರಿ ಆದೇಶ ಹೊರಡಿಸಿದ್ದಾರೆ.
ಚರ್ಚ್ ಸ್ಟ್ರೀಟ್ ರಸ್ತೆ ವಿಶಾಲವಾಗಿದ್ದು, 70 ಅಡಿ ಪಾದಚಾರಿ ಮಾರ್ಗ ಹೊಂದಿದೆ. ಹೀಗಾಗಿ ಈ ರಸ್ತೆಯಲ್ಲಿ ವಿವಿಧ ರೀತಿಯ ಚಟುವಟಿಕೆಗಳನ್ನು ನಡೆಸಲು ಅವಕಾಶವಿದೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಚರ್ಚ್ ಸ್ಟ್ರೀಟ್ ರಸ್ತೆಯನ್ನು ಫ್ರೀ ಏರ್ ಅಥವಾ ಓಪನ್ ಏರ್ ಮಾದರಿಗೆ ಮಾರ್ಪಾಡು ಮಾಡಲಾಗುತ್ತಿದೆ. ಹಾಗಾಗಿ ವಾರಾಂತ್ಯದಲ್ಲಿ ಚರ್ಚ್ ಸ್ಟೀಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
-ರವಿಕಾಂತೇಗೌಡ, ಸಂಚಾರಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ







