ಉಡುಪಿ: ರವಿವಾರ 42 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ
![ಉಡುಪಿ: ರವಿವಾರ 42 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ ಉಡುಪಿ: ರವಿವಾರ 42 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ](https://www.varthabharati.in/sites/default/files/images/articles/2020/11/8/266600-1604842661.jpg)
ಉಡುಪಿ, ನ.8: ರವಿವಾರ ಜಿಲ್ಲೆಯ 42 ಮಂದಿಯಲ್ಲಿ ಮಾತ್ರ ಕೋವಿಡ್ ಸೋಂಕು ಪತ್ತೆಯಾಗಿದೆ. ಒಟ್ಟು 41 ಮಂದಿ ಚಿಕಿತ್ಸೆಯ ಬಳಿಕ ಶನಿವಾರ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 378 ಸಕ್ರೀಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ 22 ಮಂದಿ ಪುರುಷರು ಹಾಗೂ 20 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 12 ಪುರುಷರು ಹಾಗೂ 9 ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 29, ಕುಂದಾಪುರ ತಾಲೂಕಿನ 6 ಹಾಗೂ ಕಾರ್ಕಳ ತಾಲೂಕಿನ 7 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ಹೇಳಿದರು.
ದಿನದಲ್ಲಿ ಪಾಸಿಟಿವ್ ಬಂದ 42 ಮಂದಿಯಲ್ಲಿ ಇಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರೆ, ಉಳಿದ 40 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ತಿಳಿಸಿದರು.
41 ಮಂದಿ ಗುಣಮುಖ: ಶನಿವಾರ ಜಿಲ್ಲೆಯಲ್ಲಿ 41 ಮಂದಿ ಸೋಂಕಿ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 21,639 ಆಗಿದೆ. ಜಿಲ್ಲೆಯಲ್ಲಿ ಸದ್ಯ 378 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದು, ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು.
1449 ನೆಗೆಟಿವ್: ಜಿಲ್ಲೆಯಲ್ಲಿ ಶನಿವಾರ ಒಟ್ಟು 1487 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇವರಲ್ಲಿ 1449 ಮಂದಿ ನೆಗೆಟಿವ್ ಬಂದಿದ್ದು, 38 (ಐಸಿಎಂಆರ್ ವರದಿ)ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,203 ಆಗಿದೆ.
ಜಿಲ್ಲೆಯಲ್ಲಿ ಶನಿವಾರದವರೆಗೆ ಒಟ್ಟು 1,97,620 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,75,417 ಮಂದಿ ನೆಗೆಟಿವ್ ಹಾಗೂ 22,203 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 21,639 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 187 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಶನಿವಾರ ಅಥವಾ ರವಿವಾರ ಯಾರೂ ಕೋವಿಡ್ಗೆ ಬಲಿಯಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 187ಆಗಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.