‘ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ’ ಪ್ರದಾನ

ಉಡುಪಿ, ನ.8: ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಹಿರಿಯ ಜಾನಪದ ವಿದ್ವಾಂಸ ಡಾ.ಎಸ್.ಆರ್.ಅರುಣ್ ಕುಮಾರ್ ಅವರಿಗೆ ‘ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ’ ಮತ್ತು ದರ್ಶನ ಪಾತ್ರಿ ಮೂಜೂರು ಲೋಕು ಪೂಜಾರಿ ಜಾನಪದ ಕಲಾವಿದ ಪ್ರಶಸ್ತಿ ಯನ್ನು ರವಿವಾರ ಚಿಟ್ಪಾಡಿಯ ಲಕ್ಷ್ಮೀ ಟ್ರೇಡ್ ಸೆಂಟರಿನ ಲಕ್ಷ್ಮೀ ಸಭಾಭವನದಲ್ಲಿ ಪ್ರದಾನ ಮಾಡಲಾಯಿತು.
ಮಂಗಳೂರು ಕುಲಾಲ ಸಂಘದ ಸಂಚಾಲಕ ವಿಶ್ವನಾಥ ಬಂಗೇರ ಪ್ರಶಸ್ತಿ ಪ್ರದಾನ ಮಾಡಿದರು. ತೆಂಕನಿಡಿಯೂರು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ದುಗ್ಗಪ್ಪ ಕಜೆಕಾರ್ ಅಭಿನಂದನಾ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ಜಗದೀಶ್ ಕುಮಾರ್ ವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಡಾ.ರಾಜಾ ರಾಮ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್, ಉಡುಪಿ ಘಟಕದ ಮಹಿಳಾ ಸಂಚಾಲಕಿ ನವೀಶ ಎನ್.ಪೂಜಾರಿ ಉಪಸ್ಥಿತರಿದ್ದರು.
ಮಂಗಳೂರು ವಿವಿಯ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಹಾಗೂ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಯುವವಾಹಿನಿ ಉಡುಪಿ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಸುವರ್ಣ ಸ್ವಾಗತಿಸಿದರು. ಕಾರ್ಯದರ್ಶಿ ಮಾಲತಿ ಅಮೀನ್ ವಂದಿಸಿದರು. ದಯಾನಂದ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.