ಎರಡನೇ ಹಂತದ ಕೋವಿಡ್ ಹರಡದಂತೆ ಎಚ್ಚರ ವಹಿಸಿ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ನ.9: ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ಇದಕ್ಕಾಗಿ ತಜ್ಞರ ಸಮಿತಿ ನೀಡುವ ಎಲ್ಲಾ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುವುದರ ಜೊತೆಗೆ ಮರಣ ಪ್ರಮಾಣವು ಸಹ ಇಡೀ ರಾಜ್ಯದಲ್ಲೇ ಅತ್ಯಂತ ಕಡಿಮೆಯಾಗಿದೆ. ಸಾರ್ವಜನಿಕರು ಇದರಿಂದ ಮೈ ಮರೆಯದೇ, ತಜ್ಞರು ಈಗಾಗಲೇ ಸಲಹೆ ನೀಡಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿ ಯೊಬ್ಬರೂ ತಪ್ಪದೇ ಮಾಸ್ಕ್‌ಗಳನ್ನು ಧರಿಸುವುದರೊಂದಿಗೆ, ಸುರಕ್ಷಿತಾ ಅಂತರ ಸೇರಿದಂತೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಕೋವಿಡ್‌ನ ನಿಯಂತ್ರಣಕ್ಕೆ ಸರಕಾರಿ ಮತ್ತು ಖಾಸಗಿ ವೈದ್ಯರು ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಇದಕ್ಕಾಗಿ ಅವರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದ ರೊಂದಿಗೆ ಜಿಲ್ಲೆಯನ್ನು ಕೋವಿಡ್ ಮುಕ್ತವಾಗಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಜಿಲ್ಲೆಗೆ ಹೊರರಾಜ್ಯ ಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಯನ್ನು ಮಾಡಿಸಬೇಕು. ಯಾವುದೇ ಸಭೆ ಸಮಾರಂಭಗಳಲ್ಲಿ ಮಾರ್ಗಸೂಚಿ ಯಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಜನ ಸೇರದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಈ ಬಗ್ಗೆ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿ ಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ತೀವ್ರತರ ಕಾಯಿಲೆಗಳಿಗೆ ದಾಖಲಾಗುವ ರೋಗಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ.ಪ್ರೇಮಾನಂದ್ ಹಾಗೂ ತಜ್ಞರ ಸಮಿತಿಯ ಸದಸ್ಯ ವೈದ್ಯರು ಉಪಸ್ಥಿತರಿದ್ದರು.