ಕೇಂದ್ರ- ರಾಜ್ಯದ ಯೋಜನೆಗಳು ಮನೆ ಮನೆಗೆ: ಸಚಿವ ಎಸ್ ಟಿ ಎಸ್
ದಾವಣಗೆರೆ, ನ.16: ಸಹಕಾರಿ ಚಳವಳಿ ಹಾಗೂ ಸಹಕಾರ ಕ್ಷೇತ್ರದ ಬಗ್ಗೆ ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿಯನ್ನು ಕೊಡುವ ಕೆಲಸ ಸಹಕಾರ ಸಪ್ತಾಹದ ಮೂಲಕವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ನಮ್ಮ ಇಲಾಖೆ ಮಾಡಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸೋಮವಾರ 67ನೇ ಅಖಿಲ ಭಾರತ ಸಹಕಾರ ಸಪ್ತಾಹ - 2020ರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ಠೇವಣಿ ಸಹಕಾರ ಬ್ಯಾಂಕ್ ಗಳಲ್ಲಿದೆ. ಲಕ್ಷಾಂತರ ಮಂದಿಗೆ ಸಹಕಾರ ಕ್ಷೇತ್ರದಿಂದ ಉದ್ಯೋಗ ಸಿಗುತ್ತಿದೆ. ಕಲಬುರಗಿಯಲ್ಲಿ ಸಹಕಾರ ಕ್ಷೇತ್ರದ ವತಿಯಿಂದ ಆಸ್ಪತ್ರೆ ಕಟ್ಟಿಸಿದ್ದು ಲಕ್ಷಾಂತರ ಮಂದಿಗೆ ಉಪಯೋಗವಾಗುತ್ತಿದೆ. ಇದೇ ರೀತಿಯಾಗಿ ರಾಜ್ಯದ ವಿವಿಧೆಡೆ ಸಹಕಾರಿಗಳಿಂದ ಹೆಚ್ಚಿನ ಉತ್ತಮ ಕೆಲಸವಾಗುತ್ತಿದೆ ಎಂದು ತಿಳಿಸಿದರು.
ಕೋವಿಡ್ 19 ರ ಸಂಕಷ್ಟ ಇಡೀ ದೇಶವನ್ನು ಕಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳು ಆತ್ಮನಿರ್ಭರ ಭಾರತ ಯೋಜನೆಯನ್ನು ಘೋಷಿಸಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಆರ್ಥಿಕತೆಯನ್ನು ಬಲಪಡಿಸಲು 20 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದರು.
ಇದರ ಭಾಗವಾಗಿ ರಾಜ್ಯಕ್ಕೆ 4525 ಕೋಟಿ ರೂಪಾಯಿ ಅನುದಾನ ಬಂದಿದೆ. ಇದರ ಮೂಲಕ ವಿವಿಧ ಕ್ಷೇತ್ರಗಳಿಗೆ ಸಾಲವನ್ನು ಸಹಕಾರ ಇಲಾಖೆ ಮೂಲಕ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಸಹಕಾರ ಇಲಾಖೆ ಮೂಲಕ ಇನ್ನೂ ಹೆಚ್ಚಿನ ಕ್ಷೇತ್ರಗಳಿಗೆ ಅನುಕೂಲ ಮಾಡಿಕೊಡ ಬೇಕೆಂಬ ನಿಟ್ಟಿನಲ್ಲಿ ಹೆಚ್ಚುವರಿಯಾಗಿ 600 ಕೋಟಿ ರೂಪಾಯಿ ಅನುದಾನಕ್ಕಾಗಿ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ ಎಂದು ತಿಳಿಸಿದರು.
ಅಧಿಕಾರಿಗಳ ನೇಮಕ: ಆತ್ಮನಿರ್ಭರ ಯೋಜನೆಯಡಿ ರಾಜ್ಯ ಸರಕಾರ ಹಾಗೂ ಸಹಕಾರ ಇಲಾಖೆ ನೇತೃತ್ವದಲ್ಲಿ ಆರ್ಥಿಕ ಸ್ಪಂದನ ಕಾರ್ಯ ಕ್ರಮಕ್ಕೆ ಇತ್ತೀಚೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇದರ ಮೂಲಕ 39,600 ಕೋಟಿ ರೂಪಾಯಿ ಸಾಲ ವಿತರಣೆ ಗುರಿಯನ್ನು ಹಾಕಿಕೊಳ್ಳಲಾಗಿದೆ.
ಇದರಡಿ 25 ಸಾವಿರದಿಂದ ಹಿಡಿದು 10 ಲಕ್ಷದವರೆಗೂ ಸಾಲವನ್ನು ನೀಡಿ ಸಾರ್ವಜನಿಕರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ತಯಾರಿ ಸಲಾಗುವುದು. ಆರ್ಥಿಕ ಸ್ಪಂದನವನ್ನು 4 ವಿಭಾಗಗಳಾಗಿ ವಿಂಗಡಿಸಿ ಚಾಲನೆ ನೀಡಿದ್ದೇವೆ.
ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ ಈಗಾಗಲೇ ಸಾಲ ವಿತರಣೆ ಮಾಡಲು ಚಾಲನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯ ದುರ್ಬಳಕೆಯಾಗಬಾರದು ಎಂಬ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.
ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜು ಮಾತನಾಡಿ, ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ರೈತರ ಹಾಗೂ ಸಾರ್ವಜನಿಕರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಹೈನುಗಾರಿಕೆ, ಕೃಷಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಸಚಿವರ ಸಹಕಾರ ಬೇಕಿದೆ ಎಂದು ತಿಳಿಸಿದರು.
ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಜಕೀಯದಲ್ಲಿ ತಾರತಮ್ಯ ಇರುವುದು ಸಹಜ. ಆದರೆ, ರಾಜಕಾರಣಿಗಳು ಸಹಕಾರ ಕ್ಷೇತ್ರದಲ್ಲಿದ್ದಾಗ ಜಾತಿ, ಪಕ್ಷ ಹೀಗೆ ಬೇರೆ ಬೇರೆ ಒತ್ತಡಗಳಿಂದ ನ್ಯಾಯ ಒದಗಿಸುವುದು ಕಷ್ಟ. ಆದರೆ, ಸಹಕಾರ ಸಚಿವರಾದ ಸೋಮಶೇಖರ್ ಅವರು ಇದಾವುದನ್ನೂ ನೋಡದೆ ಎಲ್ಲ ಪಕ್ಷಗಳ ಹಿರಿಯ ಸಹಕಾರಿಗಳನ್ನು ಗುರುತಿಸಿ ಅವರಿಗೆ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿ ದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ರವೀಂದ್ರನಾಥ್, ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಿರಿಯ ಸಹಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.







