ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಫಲಾನುಭವಿಗಳನ್ನು ಗುರುತಿಸಲು ಸಂಸದ ನಳಿನ್ ಸೂಚನೆ

ಮಂಗಳೂರು, ನ.17: ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯನ್ನು ಜನಪ್ರತಿನಿಧಿಗಳ ಸಹಕಾರದೊಂದಿಗೆ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೀದಿಬದಿ ವ್ಯಾಪಾರಿಗಳನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಪಿಎಂ-ಸ್ವನಿಧಿ ಯೋಜನೆಯನ್ನು ರೂಪಿಸಿದ್ದು, ಜಿಲ್ಲೆಯ ಬೀದಿಬದಿ ವ್ಯಾಪಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ರಸ್ತೆಯ ಅಕ್ಕಪಕ್ಕದಲ್ಲಿ ತಾತ್ಕಾಲಿಕ (ಶೆಡ್)ಅಂಗಡಿ ನಿರ್ಮಿಸಿ ವ್ಯಾಪಾರ ನಡೆಸುವ, ಗೂಡಂಗಡಿ, ತಳ್ಳುಗಾಡಿ, ಗೂಡ್ಸ್‌ಗಾಡಿಗಳಲ್ಲಿ ಚಿಕ್ಕ ಪುಟ್ಟ ಕ್ಯಾಂಟೀನ್, ಮನೆಯಲ್ಲಿ ಕ್ಯಾಂಟೀನ್ ನಡೆಸುವ ವ್ಯಾಪಾರಿಗಳು ಕೂಡ ತಮ್ಮ ವ್ಯಾಪಾರವನ್ನು ಮುಂದುವರಿಸಲು ಅವಶ್ಯಕವಿರುವ ತುರ್ತು ಬಂಡವಾಳಕ್ಕೆ ಈ ಯೋಜನೆಯ ಮೂಲಕ ನೆರವು ಪಡೆಯಬಹುದು ಎಂದರು.
ಬಂದರು ಪ್ರದೇಶಗಳಲ್ಲಿ, ವಾರದ ಸಂತೆ, ಜಾತ್ರೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಬೀದಿ ವ್ಯಾಪಾರ ನಡೆಸುತ್ತಾರೆ. ಅವರನ್ನು ಗುರುತಿಸಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಜಿಲ್ಲೆಯ ಎಲ್ಲಾ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚಿನ ಒಲವು ತೋರಿಸಿ ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸಬೇಕೆಂದು ಎಂದು ನಳಿನ್ ಸೂಚಿಸಿದರು.
ಕೋವಿಡ್-19, ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪಿಎಂ-ಸ್ವನಿಧಿಯ ಮೂಲಕ ವಿಶೇಷ ಕಿರುಸಾಲ ಯೋಜನೆ ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಗೆ ಈ ಯೋಜನೆ ದೊರಕಬೇಕು. ಈ ನಿಟ್ಟಿನಲ್ಲಿ ಸಂತೆ, ಮಾರುಕಟ್ಟೆ, ಬಂದರು ಸಹಿತ ಹೆಚ್ಚಿನ ಪ್ರಮಾಣದಲ್ಲಿ ಬೀದಿಬದಿ ವ್ಯಾಪಾರ ಮಾಡುವ ಪ್ರದೇಶಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ತಂಡದೊಂದಿಗೆ ಲ್ಯಾಪ್‌ಟಾಪ್ ಮೂಲಕ ಖುದ್ದಾಗಿ ಭೇಟಿ ನೀಡಿ ಅರ್ಜಿಗಳನ್ನು ಪಡೆದು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ಸೂಚಿಸಿದರು.
ವ್ಯಾಪಾರಿಗಳು ಸ್ಥಳೀಯ ಸಂಸ್ಥೆಗಳಿಂದ ಗುರುತಿನ ಚೀಟಿ ಹಾಗೂ ವ್ಯಾಪಾರ ಮಾರಾಟ ಪ್ರಮಾಣ ಪತ್ರವನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ. ಸಮೀಕ್ಷೆಯಲ್ಲಿ ಗುರುತಿಸಲ್ಪಡದ ಅಥವಾ ಸಮೀಕ್ಷೆ ನಂತರ ಬೀದಿಬದಿ ವ್ಯಾಪಾರ ಪ್ರಾರಂಭಿಸಿರುವ ಫಲಾನುಭವಿಗಳಿಗೆ ಹಾಗೂ ಅಸುಪಾಸಿನ ಊರುಗಳಿಂದ ಬಂದು ನಗರ ಹಾಗೂ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುತ್ತಿರುವವವರಿಗೆ ಶಿಫಾರಸ್ಸು ಪತ್ರ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಹೇಳಿದರು.
ಪಾಲಿಕೆಯ ವ್ಯಾಪ್ತಿಯಲ್ಲಿ ಆಯಾ ವಾರ್ಡಿನ ಕಾರ್ಪೊರೇಟರ್‌ಗಳಿಗೆ ಯೋಜನೆಯ ಕುರಿತು ಮಾಹಿತಿ ನೀಡಿ, ಅವರ ನೆರವು ಪಡೆದುಕೊಂಡು ಪ್ರತೀ ವಾರ್ಡ್‌ಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಆಗಬೇಕು ಎಂದರು.
ಪಿಎಂ ಸ್ವನಿಧಿ ಯೋಜನೆಯ ಮೂಲಕ ಬೀದಿಬದಿ ವ್ಯಾಪಾರ ಪುನಃ ಪ್ರಾರಂಭಿಸಲು ಅಥವಾ ಮುಂದುವರಿಸಲು 10,000 ರೂ. ತುರ್ತು ಬ್ಯಾಂಕ್ ಸಾಲವನ್ನು ಶೇ.7 ಬಡ್ಡಿ ಸಹಾಯ ಧನದೊಂದಿಗೆ ಒಂದು ವರ್ಷದ ಅವಧಿಯಲ್ಲಿ 12 ಮಾಸಿಕ ಕಂತುಗಳಲ್ಲಿ ಮರುಪಾವತಿಸಲು ಷರತ್ತಿನ ಮೇರೆಗೆ ಒದಗಿಸಲಾಗುತ್ತದೆ. ಜಿಲ್ಲೆಯಲ್ಲಿ 7,792 ಗುರಿ ಇದ್ದು, ಈಗಾಗಲೇ 1,840 ಅರ್ಜಿಗಳನ್ನು ಅನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯಾತ್ರಿ ನಾಯಕ್ ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಶಾಸಕ ವೇದವ್ಯಾಸ್ ಕಾಮತ್, ಮೇಯರ್ ದಿವಾಕರ್ ಪಾಂಡೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.







