ರಾಜ್ಯಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ.ನಾರಾಯಣ್ ನಾಮಪತ್ರ ಸಲ್ಲಿಕೆ

ಬೆಂಗಳೂರು, ನ. 18: ಕೋವಿಡ್-19 ಸೋಂಕಿಗೆ ಇತ್ತೀಚೆಗೆ ಬಲಿಯಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ವಿಧಾನಸಭಾ ಕಾರ್ಯದರ್ಶಿ(ಪ್ರಭಾರ)ಯೂ ಆಗಿರುವ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರೊಂದಿಗೆ ಆಗಮಿಸಿದ ನಾರಾಯಣ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಬಿಜೆಪಿ ಅಭ್ಯರ್ಥಿ ನಾರಾಯಣ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ಕ್ಕೆ ಉಪ ಚುನಾವಣೆ ಘೋಷಣೆ ನಡೆಯಲಿದ್ದು, ನಾಳೆ(ನ.19) ನಾಮಪತ್ರ ಪರಿಶೀಲನೆ ನಡೆಯಲಿದೆ. ಆ ಬಳಿಕ ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
.jpg)







