ಭಾರತ್ ಬಂದ್ ಬೆಂಬಲಿಸಿ ಕಾಂಗ್ರೆಸ್ ಪ್ರತಿಭಟನೆ: ಪಕ್ಷದ ಜಿಲ್ಲಾಧ್ಯಕ್ಷರೇ ಗೈರು !

ಶಿವಮೊಗ್ಗ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಬೆಂಬಲ ಸೂಚಿಸಿತ್ತು. ಆದರೆ,ಸ್ವತಃ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೇ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದೇ ದೂರ ಉಳಿದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಿರ್ದೇಶನದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಡಿ.8ರಂದು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆಯನ್ನು ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೇ ಪತ್ರಿಕಾ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು.
ಜಿಲ್ಲೆಯಲ್ಲಿರುವ ಎಲ್ಲಾ 14 ಬ್ಲಾಕ್ ಕಾಂಗ್ರೆಸ್ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿಯನ್ನು ಖಂಡಿಸಲು ಪ್ರತಿಭಟಿಸಬೇಕೆಂದು ಜಿಲ್ಲೆಯಲ್ಲಿ ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಿಗೆ ಸೂಚನೆ ನೀಡಿದ್ದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಪರವಾಗಿ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕೆ.ಬಿ ಪ್ರಸನ್ನಕುಮಾರ್, ಕಾಂಗ್ರೆಸ್ ನ ಮಹಾನಗರ ಪಾಲಿಕೆ ಸದಸ್ಯ ಬಿ.ಎ ರಮೇಶ್ ಹೆಗಡೆ ಸೇರಿದಂತೆ ಬೆರಳಿಕೆಯಷ್ಟು ಮಂದಿ ಸೇರಿ ಪ್ರತಿಭಟನೆ ನಡೆಸಿದರು.
ಇದನ್ನು ಹೊರತು ಪಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ರೈತ ಸಂಘದ ಕೆ.ಟಿ ಗಂಗಾಧರ್ ಬಣ, ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಆದರೆ ಎಲ್ಲಿಯೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಪಾಲ್ಗೊಳ್ಳಲಿಲ್ಲ.







