ಸಭಾಪತಿ ವಿಚಾರದಲ್ಲಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ: ಸಿಎಂ ಯಡಿಯೂರಪ್ಪ

ಬೆಂಗಳೂರು, ಡಿ. 16: `ವಿಧಾನ ಪರಿಷತ್ ಸಭಾಪತಿ ವಿಚಾರದಲ್ಲಿ ಮುಂದೇನು ಮಾಡಬೇಕು ಎಂಬ ಬಗ್ಗೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಇತರ ಎಲ್ಲರ ಜೊತೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಷತ್ ಕಲಾಪದ ವೇಳೆ ನಡೆದ ಎಲ್ಲ ಬೆಳವಣಿಗೆಗಳ ಸಂಬಂಧ ಬಿಜೆಪಿ ಮತ್ತು ಜೆಡಿಎಸ್ ನಿಯೋಗ ಈಗಾಗಲೇ ರಾಜ್ಯಪಾಲರಿಗೆ ಸಮಗ್ರ ಮಾಹಿತಿ ಸೇರಿದಂತೆ ದೂರು ನೀಡಿದೆ. ಮುಂದಿನ ತೀರ್ಮಾನದ ಬಗ್ಗೆ ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ಮಧ್ಯೆ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮಿ ಅವರನ್ನು ಮಲ್ಲೇಶ್ವರಂನ ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದ ಯಡಿಯೂರಪ್ಪ, ಶ್ರೀಗಳು ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು 36 ಸಾವಿರಕ್ಕೂ ಅಧಿಕ ಮಕ್ಕಳಿಗೆ ಅನ್ನದಾಸೋಹ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.





