ಎನ್ನೆಸ್ಸೆಸ್/ರೇಂಜರ್ಸ್ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ
ಉಡುಪಿ, ಡಿ.17: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ, ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಂಯುಕ್ತ ಆಶ್ರಯದಲ್ಲಿ ಎನ್ನೆಸ್ಸೆಸ್/ರೇಂಜರ್ಸ್ ವಿದ್ಯಾರ್ಥಿ ಗಳಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಕಾರ್ಯಕ್ರಮ ಉದ್ಘಾಟಿಸಿ, ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಗಳನ್ನು ವಹಿಸುವಂತೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣದ ಕುರಿತು ಮಾತನಾಡಿ, ಅಯೋಡಿನ್ ಮನುಷ್ಯನಿಗೆ ಅತ್ಯಗತ್ಯವಾಗಿ ಬೇಕಾಗುವ ಒಂದು ಸೂಕ್ಷ್ಮ ಪೋಷಕಾಂಶ. ಇದು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯವಶ್ಯಕ ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಾಬಾಯಿ, ಆರೋಗ್ಯ ಇಲಾಖೆಯ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಕಾರ್ಯಕ್ರಮ ದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಜಿತ್ ಕುಮಾರ್, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ತುಳಸಿ ಎಂ ಪೊಕಳೆ, ಎನ್ನೆಸ್ಸೆಸ್ ಘಟಕದ ಮುಖ್ಯಸ್ಥೆ ರಮ್ಯ ಉಪಸ್ಥಿತರಿದ್ದರು.
ಕಲ್ಪನಾ ಸ್ವಾಗತಿಸಿದರು. ಪೂಜಾ ನಿರೂಪಿಸಿ, ರೇಂಜರ್ಸ್ ಮುಖ್ಯಸ್ಥೆ ಸುಚಿತ್ರಾ ವಂದಿಸಿದರು.