ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಚರ್ಚೆ

ಉಡುಪಿ, ಡಿ.17: ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿ ಸಲು ಯೋಜನೆ ರೂಪಿಸುವ ಬಗ್ಗೆ ಶಾಸಕ ಕೆ.ರಘುಪತಿ ಭಟ್ ಸರಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಸಮಿತಿ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಇಲಾಖಾಧಿಕಾರಿಗಳ ಜೊತೆ ಚರ್ಚಿಸುವ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಳ ಗಮನಕ್ಕೆ ತಂದರು.
ಈಗಾಗಲೇ ಉಡುಪಿ ಜಿಲ್ಲಾಸ್ಪತ್ರೆಯನ್ನು 250 ಬೆಡ್ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ದೊರಕಿದೆ. ಈ ಆಸ್ಪ ತ್ರೆಯ 10 ಕೀ.ಮೀ. ವ್ಯಾಪ್ತಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಉದ್ದೇಶದಿಂದ 20 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಸಭೆಯಲ್ಲಿ ರಘುಪತಿ ಭಟ್ ತಿಳಿಸಿದರು. ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಿರುವ ಕಟ್ಟಡದಲ್ಲಿ ಈ ವರ್ಷದಿಂದಲೇ ಬಿಎಸ್ಸಿ ನರ್ಸಿಂಗ್ ಕಾಲೇಜು ಆರಂಭಿಸುವ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿವಿಯ ಕುಲಸಚಿವರಲ್ಲಿ ಚರ್ಚಿಸಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಜಂಟಿ ಕಾರ್ಯದರ್ಶಿ ಎಂ.ಶಿಲ್ಪ, ಆರೋಗ್ಯ ವಿವಿ ಕುಲಸಚಿವ ಶಿವಾನಂದ ಕಾಪ್ಸಿ, ಹುಬ್ಬಳ್ಳಿ ಕಿಮ್ಸ್ ನಿರ್ದೇಶಕ ಡಾ.ರಾಮ ಲಿಂಗಪ್ಪಸಿ.ಎ., ಬೀದರ್ ಬೀಮ್ಸ್ ನಿರ್ದೇಶಕ ಡಾ.ಶಿವ ಕುಮಾರ್ ಸಿ.ಆರ್. ಮೊದಲಾದವರು ಉಪಸ್ಥಿತರಿದ್ದರು.





