ನಿಗಮ, ಮಂಡಳಿ ಸ್ಥಾಪನೆ ಪ್ರಶ್ನಿಸಿ ಪಿಐಎಲ್: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಡಿ.17: ಜಾತಿ ಹಾಗೂ ಧರ್ಮಗಳ ಆಧಾರದಲ್ಲಿ ಮಂಡಳಿ, ನಿಗಮ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಮರಾಠಾ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆ ಅಧಿಸೂಚನೆಗೆ ಅನುಗುಣವಾಗಿ ರಾಜ್ಯ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳು ನ್ಯಾಯಾಲಯದ ಆದೇಶಗಳಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ರಾಜ್ಯ ಸರಕಾರ ಅಸಾಂವಿಧಾನಿಕವಾಗಿ ನಡೆದುಕೊಳ್ಳುತ್ತಿದ್ದು, ಪ್ರಬಲ ಜಾತಿಗಳ ಪರವಾಗಿ ಕಾನೂನಿನ ಅನುಮತಿ ಇಲ್ಲದೆ ಮತ್ತು ಸಂವಿಧಾನದ ಮೌಲ್ಯಗಳಾಗಿರುವ ಸಮಾನತೆ, ಜಾತ್ಯತೀತತೆಯನ್ನು ಗಾಳಿಗೆ ತೂರಿ ನಿಗಮ, ಮಂಡಳಿಗಳನ್ನು ಸ್ಥಾಪಿಸುತ್ತಿವೆ. ಈ ಎಲ್ಲ ಅಸಾಂವಿಧಾನಿಕ ಮಂಡಳಿ ಹಾಗೂ ನಿಗಮಗಳನ್ನು ನಿಷೇಧಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಶಿರಾ ವಿಧಾನಸಭಾ ಕ್ಷೇತ್ರ, ಬೆಳಗಾವಿ ವಿಧಾನಸಭಾ ಕ್ಷೇತ್ರ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ನಿಗಮ, ಮಂಡಳಿಗಳ ಸ್ಥಾಪನೆಗೆ ಸರಕಾರ ಮುಂದಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.







