ಗ್ರಾ.ಪಂ. ಚುನಾವಣೆ: ನೌಕರರಿಗೆ ವೇತನ ಸಹಿತ ರಜೆ ನೀಡುವಂತೆ ಸರಕಾರ ಆದೇಶ

ಬೆಂಗಳೂರು, ಡಿ.18: ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಆಯಾ ಮತ ಕ್ಷೇತ್ರಗಳಲ್ಲಿ ಬರುವ ಖಾಸಗಿ ಹಾಗೂ ಸರಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ನೌಕರರಿಗೆ ಒಂದು ದಿನದ ವೇತನ ಸಹಿತ ರಜೆ ನೀಡಬೇಕು ಎಂದು ಸರಕಾರ ಆದೇಶಿಸಿದೆ.
ಚುನಾವಣೆ ನಡೆಯುವ ಪಂಚಾಯತ್ ವ್ಯಾಪ್ತಿಯಲ್ಲಿನ ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರಕಾರದ ಕಚೇರಿಗಳು ಹಾಗೂ ಸರಕಾರಿ ಕಾರ್ಖಾನೆಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯೋಮಿಕ ಸಂಸ್ಥೆಗಳಲ್ಲಿ, ಇತರೆ ಕಡೆಗಳಲ್ಲಿ ಖಾಯಂ, ಗುತ್ತಿಗೆ, ಅರೆಗುತ್ತಿಗೆ ಕೆಲಸ ಮಾಡುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಒಂದು ದಿನದ ವೇತನ ಸಹಿತ ರಜೆಯನ್ನು ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಈ ಆದೇಶವು ತುರ್ತು ಸೇವೆಗಳ ಮೇಲಿರುವ ಸರಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದರೂ, ಈ ಸೇವೆಗಳ ಅಡಿಯಲ್ಲಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.





