ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಪರಿಶೀಲಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಡಿ.21: ರಾಜ್ಯದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಹಂತ ಹಂತವಾಗಿ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಈ ಕುರಿತು ಸಂಜೀವ್ ನಾರಾಯಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿತು.
ಸರಕಾರದ ಪರ ವಾದಿಸಿದ ವಕೀಲರು, ರಾಜ್ಯದ ಎಲ್ಲ ಶಾಲೆಗಳಲ್ಲೂ 2021ರ ಜ.1ರಿಂದ ವಿದ್ಯಾಗಮ ಜಾರಿ ಮಾಡಲಾಗುವುದು. ಈ ಬಗ್ಗೆ ಡಿ.15ರಂದು ಸರಕಾರ ಸುತ್ತೋಲೆ ಹೊರಡಿಸಿದೆ ಎಂದು ಪೀಠಕ್ಕೆ ತಿಳಿಸಿದರು.
ಇದೀಗ, ಹೈಕೋರ್ಟ್ ತನ್ನ ಅಭಿಪ್ರಾಯ ತಿಳಿಸುವ ಮೂಲಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಶಾಲೆಗಳನ್ನು ಪುನರಾರಂಭಗೊಳಿಸುವ ನಿರ್ಧಾರಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ. ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯ ಮುಖಾಂತರ ವಿದ್ಯಾರ್ಥಿಗಳಿಗೆ ಲಾಕ್‌ಡೌನ್ ವೇಳೆಯಲ್ಲಿ ಶಿಕ್ಷಣ ಒದಗಿಸುವ ಮಹತ್ತರ ನಿರ್ಧಾರ ಕೈಗೊಂಡಿದ್ದರು.
ಇದಲ್ಲದೆ ಬಾಲ ಕಾರ್ಮಿಕ, ಬಾಲ್ಯ ವಿವಾಹ ತಡೆಯಲು ಕ್ರಮಕ್ಕೆ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.





