ಡಿನೋಟಿಫಿಕೇಷನ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ: ಸಿಎಂ ಬಿಎಸ್‌ವೈಗೆ ಸಂಕಷ್ಟ

ಬೆಂಗಳೂರು, ಡಿ.22: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ, ಬಿಎಸ್‌ವೈಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಸಂಬಂಧ ಸಲ್ಲಿಸಿರುವ ಪೂರಕ ದಾಖಲೆಗಳು ಸರಿಯಿಲ್ಲ ಎಂಬುದಾಗಿ ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ.
2007-08ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಂದೂರು, ವೈಟ್‌ಫೀಲ್ಡ್ ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ನಂತರ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. 2015ರಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ನಡುವೆ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರ ವಿರುದ್ದವೂ ಪ್ರಕರಣ ದಾಖಲಾಗಿತ್ತು. ಆದರೆ, ಆರ್.ವಿ.ದೇಶಪಾಂಡೆ ವಿರುದ್ಧದ ಕೇಸ್ ರದ್ದುಪಡಿಸಿತ್ತು.
ಯಡಿಯೂರಪ್ಪ ರಾಜೀನಾಮೆ ನೀಡಲಿ
‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಎಸ್‍ವೈ ಅವರು ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ. ಹುದ್ದೆಯ ಗೌರವ ಕಾಪಾಡುವ ಹಾಗೂ ನಿಷ್ಪಕ್ಷ ತನಿಖೆ ಆಗಲು ಸಹಕರಿಸುವ ದೃಷ್ಟಿಯಿಂದ ಅವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.’
-ರವಿ ಕೃಷ್ಣಾರೆಡ್ಡಿ, ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ







