ರೂಪಾಂತರಿತ ಕೋವಿಡ್19 ಭೀತಿ: 'ರಾಜ್ಯದಲ್ಲಿ ರಾತ್ರಿ ಕರ್ಫ್ಯೂ' ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದು ಹೀಗೆ...

ಬೆಂಗಳೂರು, ಡಿ.22: ಕೊರೋನ ವೈರಸ್‍ನ ರೂಪಾಂತರ ಕಾಣಿಸಿಕೊಂಡಿರುವುದರಿಂದ, ಸಹಜವಾಗಿಯೆ ಜನರಲ್ಲಿ ಆತಂಕ ಮನೆ ಮಾಡಿದೆ. ಆದರೆ, ಮಹಾರಾಷ್ಟ್ರದ ಮುಂಬೈನಲ್ಲಿ ವಿಧಿಸಿರುವಂತೆ ನಮ್ಮ ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯ ಕಂಡು ಬರುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯು.ಕೆಯಲ್ಲಿ ಹೊಸ ಬಗೆಯ ವೈರಸ್ ಕಂಡು ಬಂದಿರುವುದರಿಂದ ದೇಶ ಹಾಗೂ ರಾಜ್ಯದ ಜನರಲ್ಲಿ ಆತಂಕವಿದೆ. ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಹೊಸ ಸ್ವರೂಪದ ವೈರಸ್ ಕಾಣಿಸಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದೆ ಎಂದರು.
ಸಾಂಕ್ರಾಮಿಕದ ಸಂದರ್ಭದಲ್ಲಿ ಎಷ್ಟು ಎಚ್ಚರ ವಹಿಸಿದರೂ ಕಡಿಮೆಯೆ. ಹೀಗಾಗಿ ಜನರು ಜಾಗರೂಕತೆಯಿಂದ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಆರೋಗ್ಯ ಇಲಾಖೆಯಿಂದ ನೀಡುವ ಎಲ್ಲ ಸಲಹೆ, ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.
ವಿದೇಶಗಳಿಂದ ಬಂದಿರುವ ಪ್ರಯಾಣಿಕರನ್ನು ಪತ್ತೆ ಮಾಡಿ ಪರೀಕ್ಷೆ ಮಾಡಿಸಲಾಗುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲು ಅಗತ್ಯ ಸಿದ್ಧತೆ ಮಾಡಲಾಗಿದೆ. ರಾಜ್ಯದಲ್ಲಿ ಯಾವುದೆ ಕಾರಣಕ್ಕೂ ರೂಪಾಂತರಗೊಂಡ ವೈರಸ್ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯನ್ನು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡುವುದಿಲ್ಲ. ಜನರ ಆರೋಗ್ಯ, ಪ್ರಾಣ ರಕ್ಷಣೆಗೆ ಸರಕಾರ ಎಲ್ಲ ರೀತಿಯಲ್ಲೂ ಕ್ರಮ ಕೈಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಈ ರೂಪಾಂತರಗೊಂಡ ವೈರಸ್ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.







