ವೈಕುಂಠ ಏಕಾದಶಿ: ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರಿಂದ ವಿಶೇಷ ಪೂಜೆ

ಬೆಂಗಳೂರು, ಡಿ. 25: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಪ್ರತ್ಯೇಕವಾಗಿ ನಗರದ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರೊಂದಿಗೆ ಇಲ್ಲಿನ ಮಹಾಲಕ್ಷ್ಮಿ ಲೇಔಟ್‍ನಲ್ಲಿ ಇರುವ ಶ್ರೀ ಶ್ರೀನಿವಾಸ ದೇಗುಲಕ್ಕೆ ಖುದ್ದು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಅದೇ ರೀತಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮಾಜಿ ಸಚಿವ ಹಾಗೂ ಶಾಸಕ ಝಮೀರ್ ಅಹ್ಮದ್ ಖಾನ್ ಅವರೊಂದಿಗೆ ರಾಜಾಜಿನಗರದಲ್ಲಿರುವ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿನ ದೇವರ ದರ್ಶನ ಪಡೆದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ಇಸ್ಕಾನ್ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಇಸ್ಕಾನ್‍ನ ನವೀನ್ ನೀರದ ದಾಸ್, ಮಧುಪಂಡಿತ್ ದಾಸ್, ಚಂಚಲಪತಿ ದಾಸ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿನ ಶ್ರೀವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಧರ್ಮಗುರುಗಳ ಶುಭ ಹಾರೈಕೆ: ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ಧರ್ಮಗುರುಗಳು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿ ಶುಭ ಕೋರಿದರು. ಇದೇ ವೇಳೆ ಸಿದ್ದರಾಮಯ್ಯನವರು ನಾಡಿನ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಹಾಜರಿದ್ದರು.
ಮತ್ತೊಂದೆಡೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಬೆಂಗಳೂರಿನ ಆರ್ಚ್ ಬಿಷಪ್ ರೆವೆರೆಂಡ್ ಡಾ.ಪೀಟರ್ ಮೆಕಾಡೋ ಅವರನ್ನು ಭೇಟಿ ಮಾಡಿ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಪುಷ್ಪಗುಚ್ಛವನ್ನು ನೀಡಿ ಶುಭಾಶಯಗಳನ್ನು ತಿಳಿಸಿದರು.






.jpg)
.jpg)
.jpg)

