ಹೊಸ ವರ್ಷಾಚರಣೆ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿಷೇಧ

ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ.30: ಕೊರೋನ ಸೋಂಕಿನ ಭೀತಿ ಹಿನ್ನೆಲೆ ಹೊಸ ವರ್ಷಾಚರಣೆ ದಿನದಂದು ಈಗಾಗಲೇ 144ರ ಅಡಿ ನಿಷೇಧಾಜ್ಞೆ ಹೇರಲಾಗಿದ್ದು, ಇದೀಗ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ತಡೆ ಹಾಕಲಾಗಿದೆ.
ಹೊಸ ವರ್ಷಾಚರಣೆಗೆ ಹೆಚ್ಚು ಜನ ಸೇರುತ್ತಿದ್ದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ಮ್ಯೂಸಿಯಂ ರಸ್ತೆ ಹಾಗೂ ಸೇಂಟ್ ಮಾರ್ಕ್ಸ್ ರಸ್ತೆಗಳಲ್ಲಿ ಇಂದು ಸಂಜೆಯಿಂದ ಜ.1ರ ಮುಂಜಾನೆಯವರೆಗೆ ವಾಹನಗಳ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿ. 31ರಂದು ಸಂಜೆ 6 ಗಂಟೆಯಿಂದ ಜ. 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದ್ದು, ಕೆಲವೆಡೆ ಮಾರ್ಗ ಬದಲಾವಣೆ ಸಹ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರು ತಿಳಿಸಿದ್ದಾರೆ.
ಇನ್ನು, ಹೊಸ ವರ್ಷಾಚರಣೆ ನೆಪದಲ್ಲಿ ಕೆಲವರು ವ್ಹೀಲಿಂಗ್, ಡ್ರ್ಯಾಗ್ರೇಸ್ ಮಾಡುವ ಸಾಧ್ಯತೆ ಇದೆ. ಹೀಗಾಗಿ, ನಗರದ ಎಲ್ಲ ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.





