ಜ.1ರಿಂದ ಶೈಕ್ಷಣಿಕ ಚಟುವಟಿಕೆ ಆರಂಭ : ದ.ಕ. ಜಿಲ್ಲಾಧಿಕಾರಿ
ಮಂಗಳೂರು, ಡಿ.30: ಹೊಸ ವರ್ಷ ಅಂದರೆ ಜ.1ರಿಂದ ಶಾಲೆಗಳ ಪುನರಾಂಭವಾಗುವ ಹಿನ್ನೆಲೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲೆಗಳಲ್ಲಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಶಾಲಾ ಆವರಣ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ, ನಗರ ಪ್ರದೇಶದ ಶಾಲೆಗಳಲ್ಲಿ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾ ಯತ್ ವತಿಯಿಂದ ಸ್ಯಾನಿಟೈಸ್ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ.
ಪ್ರತೀ ಶಾಲೆಯಲ್ಲಿ ದೈಹಿಕ ಉಷ್ಣಾಂಶ ಪರೀಕ್ಷೆ ನಡೆಸಲು ಥರ್ಮಲ್ ಸ್ಕ್ಯಾನರ್ ಉಪಕರಣ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಎಲ್ಲಾ ಶಿಕ್ಷಕರು ಮತ್ತು ಭೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ. ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಆದರೆ ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲಾ ಮುಖ್ಯ ಶಿಕ್ಷಕರಿಗೆ ಸಲ್ಲಿಸಬೇಕು. ಶಿಕ್ಷಣ ಇಲಾಖೆಯ ಎಲ್ಲಾ ಉಸ್ತುವಾರಿ ಅಧಿಕಾರಿಗಳು ಜ.1ರಿಂದ 8 ರವರೆಗೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಲು ಸೂಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಇರುವುದಿಲ್ಲ. ಆದುದರಿಂದ ಮಕ್ಕಳು ಬಿಸಿ ನೀರು ಹಾಗೂ ಉಪಹಾರದ ವ್ಯವಸ್ಥೆಯನ್ನು ತಮ್ಮ ಮನೆಯಿಂದ ತರಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ಸುರಕ್ಷಿತ ಅಂತರ ಕಾಪಾಡಿಕೊಂಡು ತರಗತಿಗಳನ್ನು ನಡೆಸಬೇಕು, ಶಾಲೆಗಳಲ್ಲಿ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ವಹಿಸಲಾಗಿದ್ದು, ಪೋಷಕರು ಯಾವುದೇ ಆತಂಕವಿಲ್ಲದೆ ಮಕ್ಕಳನ್ನು ಶಾಲಾ,ಕಾಲೇಜುಗಳಿಗೆ ಕಳುಹಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







