ನಾಳೆಯೇ ಚುನಾವಣೆ ನಡೆದರೆ ಸ್ಪಷ್ಟ ಬಹುಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ: ಸಿದ್ದರಾಮಯ್ಯ

ಬೆಂಗಳೂರು, ಡಿ. 31: ‘ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ, ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ ಶೇ.60ರಷ್ಟು ಗ್ರಾಮ ಪಂಚಾಯತ್ ಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತ್ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ' ಎಂದು ಹೇಳಿದರು.
‘ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ, ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ, ಆಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಪಕ್ಷ 3,800ಕ್ಕೂ ಅಧಿಕ ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ' ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.
‘ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ' ಎಂದು ಸಿದ್ದರಾಮಯ್ಯ ಇದೇ ವೇಳೆ ನೂತನ ಸದಸ್ಯರಿಗೆ ಸೂಚಿಸಿದರು.
‘ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.







