ಎಸ್ಸಿ, ಎಸ್ಟಿ ಅಭಿವೃದ್ಧಿ ಆಯೋಗಕ್ಕೆ ಅಧ್ಯಕ್ಷರ ನೇಮಕ ಪ್ರಶ್ನಿಸಿ ಪಿಐಎಲ್: ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಜ.5: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿ ಆಯೋಗದ ಅಧ್ಯಕ್ಷರನ್ನಾಗಿ ಬಿಜೆಪಿ ಶಾಸಕ ನೆಹರೂ ಓಲೇಕರ್ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನೆಹರು ಓಲೇಕರ್ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಕೋಲಾರ ಮೂಲದ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪರ ವಾದಿಸಿದ ವಕೀಲ ಎಸ್.ಉಮಾಪತಿ ಅವರು, ಶಾಸಕ ನೆಹರೂ ಓಲೇಕಾರ್ ಅವರು ಅಪರಾಧ ಹಿನ್ನೆಲೆವುಳ್ಳ ವ್ಯಕ್ತಿಯಾಗಿದ್ದರೂ ಅವರನ್ನು ರಾಜ್ಯ ಎಸ್ಸಿ, ಎಸ್ಟಿ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿದ್ದಾರೆ. ಹೀಗಾಗಿ, ಅವರನ್ನು ನೇಮಕ ಮಾಡಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರಾಜ್ಯ ಎಸ್ಸಿ, ಎಸ್ಟಿ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹುದ್ದೆಗೆ ಓಲೇಕರ್ ಅವರನ್ನು ನೇಮಕ ಮಾಡಿರುವ ಕುರಿತು ವಿವರಣೆ ನೀಡುವಂತೆ ರಾಜ್ಯ ಸರಕಾರ, ಓಲೇಕರ್ ಗೆ ಸೂಚನೆ ನೀಡಿದೆ. ಜತೆಗೆ ನೋಟಿಸ್ ಕೂಡ ಜಾರಿಗೊಳಿಸಿದೆ. ಅರ್ಜಿ ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿದೆ.







