ರಾಜಸ್ಥಾನ, ಕೇರಳ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಹಕ್ಕಿ ಜ್ವರಗಳ ಪ್ರಕರಣ ದೃಢಪಡಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ, ಜ. 6: ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಹಾಗೂ ಕೇರಳದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿರುವುದನ್ನು ಮೀನುಗಾರಿಕೆ, ಪಶು ಸಂಗೋಪನೆ ಹಾಗೂ ಹೈನುಗಾರಿಕೆ ಸಚಿವಾಲಯ ಬುಧವಾರ ದೃಢಪಡಿಸಿದೆ.
ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ (ಐಸಿಎಆರ್-ಎನ್‌ಐಎಚ್‌ಎಸ್‌ಎಡಿ)ನಲ್ಲಿ ಪರೀಕ್ಷೆಗೊಳಪಡಿಸಲಾದ ಈ ರಾಜ್ಯಗಳ ಮಾದರಿಗಳು ಪಾಸಿಟಿವ್ ಬಂದ ಬಳಿಕ ಸಚಿವಾಲಯ ಈ ಮಾಹಿತಿ ನೀಡಿದೆ. ರಾಜಸ್ಥಾನದ ಬರಾನ್, ಕೋಟಾ, ಝಲಾವರ ಜಿಲ್ಲೆಗಳಲ್ಲಿ ಹಾಗೂ ಮಧ್ಯಪ್ರದೇಶದ ಮಂದ್ಸೋರ್, ಇಂದೋರ್, ಮಾಲ್ವಾ ಜಿಲ್ಲೆಗಳಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ ಎಂದು ಸಚಿವಾಲಯದ ಅಧಿಕೃತ ಹೇಳಿಕೆ ತಿಳಿಸಿದೆ.
ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ವಲಸೆ ಹಕ್ಕಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದೆ. ಕೇರಳದ ಕೊಟ್ಟಾಯಂ ಹಾಗೂ ಆಲಪ್ಪುಳ ಜಿಲ್ಲೆಗಳಲ್ಲಿರುವ ಬಾತುಕೋಳಿ ಸಾಕಣೆ ಕೇಂದ್ರಗಳಲ್ಲಿ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಹಕ್ಕಿ ಜ್ವರದ ಸೋಂಕು ಹರಡದಂತೆ ವಿನಂತಿಸಿ ಮಧ್ಯಪ್ರದೇಶ ಹಾಗೂ ರಾಜಸ್ಥಾನಕ್ಕೆ 2021 ಜನವರಿ 1ರಂದು ಸೂಚನೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದ ಸ್ವೀಕರಿಸಲಾದ ಮಾಹಿತಿಯ ಪ್ರಕಾರ ಅಲ್ಲಿ ಹಕ್ಕಿ ಜ್ವರ ನಿಯಂತ್ರಿಸಲು ರಾಷ್ಟ್ರೀಯ ಕ್ರಿಯಾ ಯೋಜನೆಯ ಮಾರ್ಗಸೂಚಿಗೆ ಅನುಗುಣವಾಗಿ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಹಕ್ಕಿ ಜ್ವರ ಕೋಳಿ ಸಾಕಣೆ ಕೇಂದ್ರಗಳಿಗೆ ಹರಡುವುದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳುವಂತೆ ಮಧ್ಯಪ್ರದೇಶಕ್ಕೆ 2021 ಜನವರಿ 5ರಂದು ಸೂಚನೆ ನೀಡಲಾಗಿದೆ. ಕೇರಳದಿಂದ ಸ್ವೀಕರಿಸಲಾದ ವರದಿ ಪ್ರಕಾರ ಈಗಾಗಲೇ ಹಕ್ಕಿಜ್ವರದ ಹರಡಿರುವ ಸ್ಥಳಗಳಲ್ಲಿ 2021 ಜನವರಿ 5ರಿಂದ ನಿಯಂತ್ರಣ ಹಾಗೂ ಕಂಟೈನ್ಮೆಂಟ್ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ಅಲ್ಲದೆ ಸಾಕು ಪಕ್ಷಿಗಳನ್ನು ಹತ್ಯೆಗೈಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವಾಲಯ ಹೇಳಿದೆ.







