ಜ.12ರಂದು ಉಡುಪಿ ಜಿಲ್ಲಾ ಮಟ್ಟದ ಜನಸೇವಕ ಸಮಾವೇಶ
ಉಡುಪಿ, ಜ.9: ಮುಂಬರಲಿರುವ ಜಿಪಂ ಮತ್ತು ತಾಪಂ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಜನ ಸೇವಕ ಸಮಾವೇಶವನ್ನು ಜ.12ರಂದು ಬೆಳಗ್ಗೆ 10.30ಕ್ಕೆ ಉಡುಪಿಯ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಗುವುದು. ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್, ಸಂಸದ ಈರಣ್ಣ ಕಡಾಡಿ ಮೊದಲಾದವರು ಭಾಗವಹಿಸಲಿರುವರು ಎಂದರು.
ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸ್ಪರ್ಧಿಸಿರುವ 2,351 ಅಭ್ಯರ್ಥಿಗಳಲ್ಲಿ 1,495 ಬಿಜೆಪಿ ಬೆಂಬಲಿತ ಅಭ್ಯರ್ಥಿ ಗಳು ವಿಜೇತರಾಗಿದ್ದಾರೆ. ಜಿಲ್ಲೆಯ 153 ಗ್ರಾಪಂಗಳ ಪೈಕಿ 115ರಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿಯಲಿ ದ್ದಾರೆ. ಜಿಲ್ಲೆಯಾದ್ಯಂತ ಶೇ.63 ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಆಯ್ಕೆಯಾಗಿದ್ದು, ಶೇ.75ಕ್ಕೂ ಅಧಿಕ ಗ್ರಾಪಂಗಳಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಗ್ರಾಪಂ ಚುನಾವಣೆಯ ಈ ಪ್ರಚಂಡ ಗೆಲುವು ಮುಂದಿನ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಉಪಸ್ಥಿತರಿದ್ದರು.







