ಉಡುಪಿ: ಎಂಡೋಸಲ್ಫಾನ್ ಅಂಗವಿಕಲರ ಪುನರ್ವಸತಿ ಕೇಂದ್ರಕ್ಕೆಅನುದಾನ ಬಿಡುಗಡೆಗೆ ಆಗ್ರಹಿಸಿ ಸಚಿವ ಬೊಮ್ಮಾಯಿಗೆ ಮನವಿ

ಉಡುಪಿ, ಜ.9: ಹೊಸದಿಲ್ಲಿಯ ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ (ಎನ್‌ಪಿಆರ್‌ಡಿ)ಗೆ ಸಂಯೋಜಿಸಲ್ಪಟ್ಟ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ನಿಯೋಗವೊಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತರಿಗಾಗಿ ಸ್ಥಾಪಿಸಲುದ್ದೇಶಿಸಿರುವ ಪುನರ್ವಸತಿ ಕೇಂದ್ರ ಹಾಗೂ ಸುಸಜ್ಜಿತ ಆಸ್ಪತ್ರೆಗೆ ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿತು.
ಒಕ್ಕೂಟದ ನೇತೃತ್ವದಲ್ಲಿ ಅಂಗವಿಕಲರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ನಡೆದಿದ್ದು, ಇದರ ಪರಿಣಾಮ ಎಂಡೋಪೀಡಿತ ಅಂಗವಿಕಲರಿಗಾಗಿ ಬೈಂದೂರು ತಾಲೂಕಿನ ನಾಡ, ಸೇನಾಪುರದಲ್ಲಿ ಕಾದಿರಿಸಿದ ಐದು ಎಕರೆ ಸರಕಾರಿ ಜಾಗದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಪುನರ್ವಸತಿ ಕೇಂದ್ರ ಹಾಗೂ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಿಂದ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.







