ಅಮಿತ್ ಶಾ- ಸಿಎಂ ಯಡಿಯೂರಪ್ಪ ಮಾತುಕತೆ: ನಾಯಕತ್ವ ಬದಲಾವಣೆಯ ಪ್ರಸ್ತಾವ ಮುಂದಿಟ್ಟ ವರಿಷ್ಠರು ?

Picture: Twitter @BSYBJP
ಹೊಸದಿಲ್ಲಿ, ಜ.10: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎದುರು ಪ್ರಸ್ತಾವ ಮುಂದಿಟ್ಟಿದ್ದು, ಈ ಬಗ್ಗೆ ಜ.14ರೊಳಗಾಗಿ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ರವಿವಾರ ಹೊಸದಿಲ್ಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ನಡೆದ ಮಾತುಕತೆ ವೇಳೆ ಈ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಯಡಿಯೂರಪ್ಪ ಸಮ್ಮತಿಸಿದರೆ ದಕ್ಷಿಣ ಭಾರತದಲ್ಲಿ ಉನ್ನತ ಸ್ಥಾನಮಾನ(ರಾಜ್ಯಪಾಲ ಹುದ್ದೆ?), ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಪುತ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರರನ್ನು ಪರಿಗಣಿಸುವುದರ ಬಗ್ಗೆಯೂ ಮಾತುಕತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಆದರೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಕುರಿತು ವರಿಷ್ಠರು ಮುಂದಿಟ್ಟ ಪ್ರಸ್ತಾವಕ್ಕೆ ಯಡಿಯೂರಪ್ಪ ಯಾವುದೆ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು ಎಂದು ಹೇಳಲಾಗುತ್ತಿದೆ. ಇದಕ್ಕೂ ಮುನ್ನ, ಗ್ರಾಮ ಪಂಚಾಯತ್ ಚುನಾವಣೆಗಳ ಫಲಿತಾಂಶ, ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಕುರಿತು ವರಿಷ್ಠರು ಚರ್ಚೆ ನಡೆಸಿದರು.
ಬಿಜೆಪಿ ಸರಕಾರ ರಚನೆಯಾಗಿ ಒಂದೂವರೆ ವರ್ಷ ಕಳೆದರೂ ಈವರೆಗೆ ವರಿಷ್ಠರಿಂದ ಸಚಿವ ಸಂಪುಟ ವಿಸ್ತರಣೆಗೆ ಅವಕಾಶ ಸಿಗದೆ ಇರುವುದರಿಂದ, ಆಕಾಂಕ್ಷಿಗಳಲ್ಲಿ ಅಸಮಾಧಾನ ಮೂಡುತ್ತಿರುವುದಲ್ಲದೆ, ಅವರ ಸಂಖ್ಯೆಯು ಹೆಚ್ಚುತ್ತಲೆ ಹೋಗುತ್ತಿದೆ. ಆದುದರಿಂದ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಗೆ ಅವಕಾಶ ನೀಡಬೇಕು ಎಂದು ವರಿಷ್ಠರಿಗೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
ಮಾತುಕತೆ ತೃಪ್ತಿಕರ: ಅಮಿತ್ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಸಚಿವ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ಎಂಬುದರ ಬಗ್ಗೆ ವರಿಷ್ಠರು ಶೀಘ್ರವೆ ಶುಭ ಸುದ್ದಿಯನ್ನು ನೀಡಲಿದ್ದಾರೆ. ಇಂದು ನಡೆದ ಮಾತುಕತೆ ಅತ್ಯಂತ ತೃಪ್ತಿದಾಯಕವಾಗಿತ್ತು ಎಂದರು.
ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಂತೆ ಹೇಳಿದ್ದಾರೆ. ಆದಷ್ಟು ಬೇಗ ಆಕಾಂಕ್ಷಿಗಳ ಪಟ್ಟಿಯನ್ನು ಕಳುಹಿಸಿಕೊಟ್ಟರೆ ಅಂತಿಮಗೊಳಿಸಿ ಕೊಡುವುದಾಗಿ ಹೇಳಿದ್ದಾರೆ. ಅಲ್ಲದೆ, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿಯೂ ಪಕ್ಷ ಉತ್ತಮ ಸಾಧನೆ ಮಾಡುವಂತೆ ನೋಡಿಕೊಳ್ಳಿ ಎಂದು ವರಿಷ್ಠರು ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಜ.16ರಂದು ಅಮಿತ್ ಶಾ ಬೆಂಗಳೂರಿಗೆ ಬರುತ್ತಿದ್ದಾರೆ. ಅವರ ಕಾರ್ಯಕ್ರಮಗಳ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ಆಕಾಂಕ್ಷಿಗಳು ಸ್ವಲ್ಪ ಕಾಯಬೇಕು. ವರಿಷ್ಠರು ಶುಭ ಸುದ್ದಿಯನ್ನು ನೀಡಲಿದ್ದಾರೆ ಎಂದ ಅವರು, ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ಕುರಿತು ಈ ಸಂದರ್ಭದಲ್ಲಿ ಪ್ರತಿಕ್ರಿಯಿಸುವುದಿಲ್ಲ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ನಡೆದ ಚರ್ಚೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.
ರಾಜ್ಯದಲ್ಲಿ ನಾಯಕತ್ವ ವಿಷಯದಲ್ಲಿ ಯಾವುದೆ ಗೊಂದಲ ಇಲ್ಲ ಎಂದು ಹೊಸದಿಲ್ಲಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.







