ಆಸ್ತಿ ನಷ್ಟ ಅನುಭವಿಸಿದವರಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಸೂಚಿಸಿದ್ದೇವೆ: ಹೈಕೋರ್ಟ್‍ಗೆ ಸರಕಾರದ ಮಾಹಿತಿ
ಡಿಜೆ ಹಳ್ಳಿ ಗಲಭೆ ಪ್ರಕರಣ
ಬೆಂಗಳೂರು, ಜ.30: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆಸ್ತಿ ನಷ್ಟ ಅನುಭವಿಸಿದವರು ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಸೂಚಿಸಿ ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗಿದೆ ಎಂದು ಹೈಕೋರ್ಟ್‍ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ.
ಈ ಕುರಿತು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರಕಾರ ಈ ಮಾಹಿತಿ ನೀಡಿದೆ.
ವಿಚಾರಣೆ ವೇಳೆ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, 2020ರ ಆ. 11ರಂದು ನಡೆದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ವಾಹನ ಸೇರಿದಂತೆ ಆಸ್ತಿ ನಷ್ಟ ಅನುಭವಿಸಿದವರು ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಸೂಚನೆ ನೀಡಿ ಜ.28ರಂದು ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿದ್ದೇವೆ ಎಂದು ತಿಳಿಸಿದರು. ಅಲ್ಲದೇ, ನ್ಯಾಯಾಲಯದ ನಿರ್ದೇಶನದಂತೆ ನ್ಯಾ. ಕೆಂಪಣ್ಣ ನೇತೃತ್ವದ ಕ್ಲೇಮು ಕಮಿಷನ್‍ಗೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದು, ಕಮಿಷನ್ ಕಾರ್ಯಾರಂಭ ಮಾಡಿದೆ ಎಂದು ವಿವರಿಸಿದರು.
ಪರಿಹಾರ ಕೋರಿ ಅರ್ಜಿ ಸಲ್ಲಿಸುವವರು ಕ್ಲೇಮು ಕಮಿಷನರ್‍ಗೆ ಫೆ.28ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ನಗರದ ಅರಮನೆ ರಸ್ತೆಯಲ್ಲಿರುವ ಬಾಲಬ್ರೂಯಿ ಅತಿಥಿಗೃಹ ಕಟ್ಟಡದಲ್ಲಿರುವ ಮೊದಲನೆ ಮಹಡಿಯಲ್ಲಿರುವ ಕಚೇರಿಗೆ ನೇರವಾಗಿ ತೆರಳಿ ಸಲ್ಲಿಸಬಹುದು. ಅಥವಾ ಇದೇ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಕೊರಿಯರ್ ಮೂಲಕವೂ ಸಲ್ಲಿಸಬಹುದು.
ಪರಿಹಾರ ಕೋರಿ ಅರ್ಜಿ ಸಲ್ಲಿಸುವವರು ತಮ್ಮ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ವಿಳಾಸದೊಂದಿಗೆ, ಘಟನೆಗೆ ಸಂಬಂಧಿಸಿದ ವಿಡಿಯೋ, ಆಡಿಯೋಗಳನ್ನು ಸಲ್ಲಿಸಬಹುದಾಗಿದೆ. ಅಲ್ಲದೇ, ಆಸ್ತಿಗೆ ಹಾನಿ, ನಷ್ಟ ಉಂಟು ಮಾಡಿದ್ದವರ ಮಾಹಿತಿ ಇದ್ದರೆ ಅದನ್ನು ಸಲ್ಲಿಸಬಹುದು ಎಂದು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ವಿಚಾರಣೆ ಮುಂದೂಡಿತು.







