ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಉಡುಪಿ, ಜ.30: ಉಡುಪಿ ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಜ್ಜರಕಾಡು ಡಾ.ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಲಾದ ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಇಂದು ಚಾಲನೆ ನೀಡಲಾಯಿತು.
ಪಂದ್ಯಾಟವನ್ನು ಉದ್ಘಾಟಿಸಿದ ಜಿಪಂ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಕ್ರೀಡೆಯಿಂದ ತಾಳ್ಮೆ ಹಾಗೂ ಏಕಾಗ್ರತೆ ಹೊಂದಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಸಿಕೊಂಡು ಮಾನಸಿಕ, ದೈಹಿಕ ಆರೋಗ್ಯದ ಕಾಳಜಿಗೆ ಒತ್ತು ನೀಡಬೇಕು. ಮಕ್ಕಳ ಬೆಳವಣಿಗೆ ದೃಷ್ಟಿಯಿಂದ ಕ್ರೀಡಾಕೂಟ ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ., ಡಾ. ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್. ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.





