ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡಮಿ ಪ್ರಶಸ್ತಿ ಪ್ರದಾನ ಸಮಾರಂಭ

ಚಾಮರಾಜನಗರ, ಫೆ.7: ಅಂತರಾಜ್ಯ ಗಡಿ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕರ್ನಾಟಕ ಜಾನಪದ ಅಕಾಡಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಭಾನುವಾರ ನಡೆಯಿತು.
ಸಮಾರಂಭ ಕರ್ನಾಟಕ ಜಾನಪದ ಅಕಾಡಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ನೇತೃತ್ವದಲ್ಲಿ ಚಾಮರಾಜನಗರದ ಡಾ.ಬಿ.ಅರ್ ಅಂಬೇಡ್ಕರ್ ಭವನದಲ್ಲಿ ಅದ್ದೂರಿಯಾಗಿ ಜರುಗಿತು.
ಸಂಗೀತ ಲೋಕದ ನಾದಬ್ರಹ್ಮ ಹಂಸಲೇಖರವರು ಈ ಸಮಾರಂಭದ ಕೇಂದ್ರ ಬಿಂದುವಾಗಿದ್ದರು. ನಾದಬ್ರಹ್ಮ ಹಂಸಲೇಖ ಅವರನ್ನು ಜಾನಪದ ಕಲಾತಂಡಗಳೊಂದಿಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎನ್.ಮಹೇಶ್ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಬರಮಾಡಿಕೊಂಡರು.
ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕನ್ನಡ ಮತ್ತು ಸಂಸ್ಕೃತಿ ಮತ್ತು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಡಮರುಗ ಭಾರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
2020 ಸಾಲಿನ ಜಾನಪದ ಅಕಾಡಮಿ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ, ರಾಜ್ಯ ಸರ್ಕಾರ ಕಲಾವಿದರ ನೆರವಿಗೆ ಬದ್ದವಾಗಿದ್ದು, ಕೊರೊನ ಸಂಕಷ್ಟ ಕಾಲದಲ್ಲಿ ಕಲಾವಿದರಿಗೆ ಆರ್ಥಿಕ ನೆರವು ನೀಡಿದೆ. ರಾಜ್ಯದ ಎಲ್ಲಾ ಕಡೆಗಳಲ್ಲೂ ಜಾನಪದ ಕಲೆಗಳ ಮೂಲಕ ರಾಜ್ಯದ ಸಂಸ್ಕೃತ ಉಳಿದಿದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅದ್ಯಕ್ಷತೆಯನ್ನು ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಶಾಸಕರಾದ ಎನ್.ಮಹೇಶ್, ಸಿ.ಎಸ್.ನಿರಂಜನ್ ಕುಮಾರ್, ಜಾನಪದ ಅಕಾಡಮಿ ಸದಸ್ಯ ಸಿ.ಎಂ.ನರಸಿಂಹ ಮೂರ್ತಿ, ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.











