ಮಾ. 27ರಂದು ಮೆಗಾ ಲೋಕ್ ಅದಾಲತ್
ಉಡುಪಿ, ಫೆ.11: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ಮಾರ್ಚ್ 27ರಂದು ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಈ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ವಿದ್ಯುತ್ ಹಾಗೂ ನೀರಿನ ಶುಲ್ಕ, ವೈವಾಹಿಕ /ಕುಟುಂಬ ನ್ಯಾಯಾಲಯ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣ ಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ನ್ಯಾಯಾಲಯದಲ್ಲಿ ದಾಖಲಾ ಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







