ವಿದ್ಯಾರ್ಥಿ ವೇತನ ಬಿಡುಗಡೆಗೆ ಕ್ರಮ : ಸಚಿವ ಬಾಳಾಸಾಹೇಬ ಪಾಟೀಲ
ಮಂಗಳೂರು, ಫೆ.11: ಕೊರೋನ ಹಾವಳಿಯಿಂದಾಗಿ ಆರ್ಥಿಕ ವ್ಯವಸ್ಥೆಯಲ್ಲಿ ಏರುಪೇರಾಗಿದೆ. ಇದರಿಂದ ಬಹುತೇಕ ಇಲಾಖೆಯ ಅನೇಕ ಯೋಜನೆಗಳ ಅನುದಾನ ಕಡಿತಗೊಳಿಸಲಾಗಿದೆ. ಹಾಗಾಗಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಮಸ್ಯೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯ ಜೊತೆ ಚರ್ಚಿಸಿ ವಿದ್ಯಾರ್ಥಿ ವೇತನ ಬಿಡುಗಡೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ ಹೇಳಿದರು.
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿ ವೇತನಕ್ಕೆ 90 ಕೋ.ರೂ. ಮಂಜೂರಾಗಿತ್ತು. ಅದರಲ್ಲಿ 3.50 ಲಕ್ಷ ವಿದ್ಯಾರ್ಥಿಗಳಿಗೆ 78 ಕೋ.ರೂ. ಬಿಡುಗಡೆಯಾಗಿದೆ. ಇನ್ನೂ 4.50 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆ ಆಗಬೇಕಿದೆ. ಆದರೆ, ನಮ್ಮಲ್ಲಿ ಸದ್ಯ 12 ಕೋ.ರೂ. ಮಾತ್ರವಿದೆ. ಅನುದಾನದ ಕೊರತೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಕಾಲಕ್ಕೆ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಬಜೆಟ್ ಪೂರ್ವಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿಯ ಜೊತೆ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.





