ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್‍ರಾಜ್‍ಗೆ ಹೈಕೋರ್ಟ್ ಜಾಮೀನು

ಬೆಂಗಳೂರು, ಫೆ.12: ಕೆ.ಜಿ.ಹಳ್ಳಿ ಮತ್ತು ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಮಾಜಿ ಮೇಯರ್ ಸಂಪತ್‍ರಾಜ್‍ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಸಂಪತ್ ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ.
ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಹಾಗೂ ನಾಶಪಡಿಸಬಾರದು. ತನಿಖೆಗೆ ಹಾಗೂ ವಿಚಾರಣೆಗೆ ಸಹಕರಿಸಬೇಕು ಮತ್ತು ತಪ್ಪದೇ ಹಾಜರಾಗಬೇಕು ಎಂದು ಷರತ್ತುಗಳನ್ನು ವಿಧಿಸಿ ನ್ಯಾಯಪೀಠವು ಜಾಮೀನು ಮಂಜೂರು ಮಾಡಿದೆ. ತನಿಖೆ ಅಂತಿಮ ಹಂತಕ್ಕೆ ಬಂದಿರುವುದರಿಂದ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ ಸಂಪತ್ ರಾಜ್ ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ, ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ಸಂಪತ್ ರಾಜ್ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.





