ರಾಜ್ಯದ ಆರ್ಥಿಕ ಪರಿಸ್ಥಿತಿ ವೇಗವಾಗಿ ಚೇತರಿಕೆ: ಸಚಿವ ಕೋಟ

ಉಡುಪಿ, ಫೆ.14: ಕೋವಿಡ್ ಸಂಕಷ್ಟದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆಯಾದರೂ ಇದೀಗ ವೇಗವಾಗಿ ಚೇತರಿಸಿಕೊಳ್ಳುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರದಲ್ಲಿ ದೇಶವು ಕೋವಿಡ್ ಹಾವಳಿಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಗ್ರಂಥಾಲಯ, ಪ್ರಯೋಗಾಲಯ ಮತ್ತು ತರಗತಿ ಕೊಠಡಿಗಳ ಉದ್ಘಾಟನೆಯನ್ನು ಶನಿವಾರ ನೆರೇರಿಸಿ ಅವರು ಮಾತನಾಡುತಿದ್ದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಶೈಕ್ಷಣಿಕವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಗಣನೀಯ ಸಾಧನೆ ಮಾಡಿದೆ. ಉತ್ತಮ ಚಾರಿತ್ರ್ಯವಂತ ವಿದ್ಯಾರ್ಥಿ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರವು ಪ್ರಮುಖವಾಗಿದೆ. ಆರೋಗ್ಯವಂತ ವ್ಯಕ್ತಿತ್ವವುಳ್ಳ ವಿದ್ಯಾರ್ಥಿಗಳ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣ ಮತ್ತು ಪರಿಣಾಮಕಾರಿ ಬೋಧನಾ ಕ್ರಮವು ಅತ್ಯಗತ್ಯವಾಗಿದೆ ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಜಿಪಂ ಸದಸ್ಯ ಜನಾರ್ದನ ತೋನ್ಸೆ, ತಾಪಂ ಸದಸ್ಯ ಧನಂಜಯ ಕುಂದರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ದಯಾನಂದ ಶೆಟ್ಟಿ, ಮಂಜುಳಾ ವಿ. ಪ್ರಸಾದ್, ರಕ್ಷಕ ಶಿಕ್ಷಕ ಸಂಘದ ವೈದ್ಯ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಗೋಪಾಲಕೃಷ್ಣ ಎಂ.ಗಾಂವ್ಕರ್ ವಂದಿಸಿದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಆಂಗ್ಲ ವಿಭಾಗದ ಪ್ರಾಧ್ಯಾಪಕಿ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.







