ಕಲಬುರಗಿ ಮ್ಯಾನ್‍ಹೋಲ್ ದುರಂತ: ಕಾರ್ಮಿಕರ ಕುಟುಂಬದವರಿಗೆ ಉದ್ಯೋಗ ಒದಗಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಫೆ.17: ಕಲಬುರಗಿಯಲ್ಲಿ ಶೌಚಗುಂಡಿ(ಮ್ಯಾನ್‍ಹೋಲ್) ಸ್ವಚ್ಛಗೊಳಿಸುವಾಗ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಅವರ ಕುಟುಂಬದವರಿಗೆ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅಲ್ಲದೆ, ಕೈಯಿಂದ ಶೌಚಗುಂಡಿಯನ್ನು ಸ್ವಚ್ಛಗೊಳಿಸುವುದಕ್ಕೆ ನಿಷೇಧವಿದೆ ಎಂದು ರಾಜ್ಯ ಸರಕಾರ ಎಲ್ಲ ನಗರ, ನಗರ ಸಭೆ, ಪುರಸಭೆ ಹಾಗೂ ಗ್ರಾಮೀಣ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ನ್ಯಾಯಪೀಠವು ಸೂಚನೆ ನೀಡಿದೆ.
ರಾಜ್ಯದಲ್ಲಿ ಮನುಷ್ಯರಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ಧತಿಯನ್ನು ತಡೆಯಲು ಸರಕಾರಕ್ಕೆ ಅಗತ್ಯ ನಿರ್ದೇಶನ ನೀಡಲು ಕೋರಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್‍ನ(ಎಐಸಿಸಿಟಿಯು) ಕರ್ನಾಟಕ ಘಟಕ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‍ಎಲ್‍ಎಸ್‍ಎ) ಸಲ್ಲಿಸಿದ್ದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.
ಕಲಬುರಗಿಯಲ್ಲಾದ ಇಬ್ಬರ ಸಾವಿನ ಬಗ್ಗೆ ತನಿಖೆ ನಡೆಸಿ, ಎಫ್‍ಎಸ್‍ಎಲ್ ವರದಿ ಹಾಗೂ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ತನಿಖಾ ಪ್ರಗತಿ ವರದಿಯನ್ನು ಸಲ್ಲಿಸಲು ಸರಕಾರಕ್ಕೆ ನ್ಯಾಯಪೀಠವು ಸೂಚನೆ ನಿಡಿತು.
ಮ್ಯಾನ್‍ಹೋಲ್‍ಗೆ ಇಳಿದು ಕಾರ್ಮಿಕರು ಮೃತಪಡುತ್ತಿರುವ ಪ್ರಕರಣಗಳು ಮರುಕಳಿಸುತ್ತಿರುವುದು ಆತಂಕಕಾರಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಕೋರ್ಟ್, ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಸರಕಾರ ಹೈಕೋರ್ಟ್ ನ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ, ಕೋರ್ಟ್ ಆದೇಶ ಪಾಲಿಸದಿದ್ದರೆ, ಗಂಭೀರ ಕ್ರಮಕೈಗೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.







