ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದೆಲ್ಲೆಡೆ ರೈತರಿಂದ ರೈಲು ತಡೆ ಚಳವಳಿ

ಬೆಂಗಳೂರು, ಫೆ.18: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿರುವ ರೈತ ಸಂಘಟನೆಗಳು, ರಾಜ್ಯದೆಲ್ಲೆಡೆ ರೈಲು ತಡೆ(ರೈಲ್‍ರೋಕೋ) ಚಳವಳಿ ನಡೆಸಿ, ಆಕ್ರೋಶ ಹೊರಹಾಕಿದರು.
ಗುರುವಾರ ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಬೆಂಗಳೂರು, ಬೆಳಗಾವಿ, ಕೋಲಾರ, ಮಂಡ್ಯ, ಮೈಸೂರು, ಹುಬ್ಬಳ್ಳಿ, ಧಾರವಾಡ, ರಾಯಚೂರು, ವಿಜಯಪುರ ಸೇರಿದಂತೆ ವಿವಿಧೆಡೆ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಹೋರಾಟಗಾರರು, ರೈಲು ತಡೆಗೆ ಮುಂದಾದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ಬಂಧಿಸಿದರು.
ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದೆ, ಏಕಾಏಕಿ ತಡೆದು, ವಶಕ್ಕೆ ಪಡೆಯುತ್ತಿದ್ದಾರೆಂದು ರೈತರು ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆಯಿತು. ಬಳಿಕವೂ ಪೊಲೀಸರು ಹಲವು ರೈತರನ್ನು ವಶಕ್ಕೆ ಪಡೆದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ರೈತರು ಘೋಷಣೆಗಳನ್ನು ಕೂಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಕಳೆದ ಎರಡೂವರೆ ತಿಂಗಳಿಂದ ಗಡಿ ಭಾಗಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ ಟ್ರ್ಯಾಕ್ಟರ್ ಮೆರವಣಿಗೆ, ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಲಾಗಿದೆ. ಆದರೆ, ಕೇಂದ್ರ ಸ್ಪಂದನೆ ನೀಡದೆ, ಇರುವುದು ದುರಂತ ಎಂದು ಪ್ರತಿಭಟನಾಕಾರರು ಹೇಳಿದರು.
ಸಮಿತಿ: ರಾಜಧಾನಿ ಬೆಂಗಳೂರಿನ ಯಶವಂತಪುರ, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈತ, ದಲಿತ, ಕಾರ್ಮಿಕಐಕ್ಯ ಹೋರಾಟ ಸಮಿತಿ ವತಿಯಿಂದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ರೈಲುತಡೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್, ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಸರಕಾರ ಮಾತುಕತೆ ನೆಪದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
ಅದೇ ರೀತಿ, ಬೆಳಗಾವಿಯಲ್ಲಿ ಕೇಂದ್ರದ ಮಾಜಿ ಸಚಿವ ಬಾಬಾಗೌಡ ನೇತೃತ್ವದಲ್ಲಿ ರೈತರು ರೈಲು ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳು ಪಾಲ್ಗೊಂಡು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಂದೋಬಸ್ತ್: ಹಲವು ಕಡೆಗಳಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ಪೊಲೀಸರು ತಡೆದ ಘಟನೆಗಳು ವರದಿಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
‘ಪ್ರಧಾನಿ ರೈತರ ಹಿತಕ್ಕಾಗಿ ದುಡಿಯಲಿ’
ಪ್ರಧಾನಿ ನರೇಂದ್ರ ಮೋದಿ, ಕಾರ್ಪೋರೇಟ್ ಕಂಪೆನಿಗಳ ಮರ್ಜಿಯಲ್ಲಿ ಕಾರ್ಯ ನಿರ್ವಹಿಸದೆ ದೇಶದ ರೈತರ ಹಿತರಕ್ಷಣೆಗಾಗಿ ದುಡಿಯಬೇಕು. ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ರಾಜ್ಯಸಭೆಯಲ್ಲಿ ತಿಳಿಸಿರುವಂತೆ ಕೂಡಲೇ ಸಭೆಕರೆದು ಚಳುವಳಿನಿರತ ರೈತ ಮುಖಂಡರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ರೈತರಿಗೆ ಬೇಡದ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಹೋರಾಟ ಮತ್ತಷ್ಟು ತೀವ್ರಗೂಳಿಸಲಾಗುವುದು.
-ಕುರುಬೂರು ಶಾಂತಕುಮಾರ್, ರೈತ ಪರ ಹೋರಾಟಗಾರ






.jpg)
.jpg)
.jpg)
.jpg)
.jpg)
.jpg)

