ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಸಿಎಂ ಸೂಚನೆ?

ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾ.2: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಸಾರವಾಗುತ್ತಿದ್ದಂತೆ, ಇಡೀ ಪ್ರಕರಣದ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೆ, ನಗರ ಪೊಲೀಸ್ ಆಯುಕ್ತರ ಕಚೇರಿಗೆ ಸಲ್ಲಿಕೆಯಾಗಿರುವ ದೂರಿನಲ್ಲಿ ತಿಳಿಸಿರುವ ಅಂಶಗಳ ಬಗ್ಗೆಯೂ ಹಿರಿಯ ಅಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ, ಸರಕಾರಕ್ಕೆ ಎದುರಾಗಬಹುದಾದ ಮುಜುಗರದಿಂದ ತಪ್ಪಿಸಿಕೊಳ್ಳಲು ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ಸಭೆಗೆ ಆಗಮಿಸುತ್ತಾರಾ?: ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಾಳೆ ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಆ ಸಭೆಗೆ ರಮೇಶ್ ಜಾರಕಿಹೊಳಿ ಆಗಮಿಸುತ್ತಾರಾ? ಎಂಬ ಪ್ರಶ್ನೆ ಉದ್ಭವಿಸಿದೆ.
ಮಾ.4 ರಿಂದ ಬಜೆಟ್ ಅಧಿವೇಶನ ಆರಂಭಗೊಳ್ಳುತ್ತಿರುವುದರಿಂದ, ಪ್ರತಿಪಕ್ಷಗಳಿಗೆ ಸರಕಾರದ ವಿರುದ್ಧ ಮುಗಿಬೀಳಲು ಈ ರಾಸಲೀಲೆ ಪ್ರಕರಣವು ಪ್ರಮುಖ ಅಸ್ತ್ರವಾಗಿ ಪರಿಣಮಿಸಿದೆ.







