ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ: ಸಚಿವ ಭೈರತಿ ಬಸವರಾಜ್

ಮಂಗಳೂರು, ಮಾ.6: ನಾವು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬಂದಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ. ನಮ್ಮ ವಿರುದ್ಧ ಕೆಲವು ಷಡ್ಯಂತ್ರಗಳು ನಡೀತಾ ಇದೆ. ಹೀಗಾಗಿ ನಾವು ನ್ಯಾಯಾಲಯಕ್ಕೆ ಹೋಗಿದ್ದೇವೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.
ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದರ ಹಿಂದೆ ಬೇರೆ ಯಾವ ಉದ್ದೇಶ ಇಲ್ಲ. ಮುಂದೆ ನಮಗೆ ತೊಂದರೆಯಾಗದಿರಲಿ, ಇಮೇಜಿಗೆ ಧಕ್ಕೆ ಆಗದಿರಲಿ ಮುಜುಗರ ಆಗದಿರಲಿ ಎಂದು ನಮ್ಮ ಆವಶ್ಯಕತೆಗಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಮುಂಬೈನಲ್ಲಿ ಏನೂ ನಡೆದೇ ಇಲ್ಲ. ಹಾಗೇನಾದರೂ ಇದ್ದರೆ ಅವರು ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲೆಸೆದ ಸಚಿವ ಭೈರತಿ, ನಾವು ಕೈ, ಬಾಯಿ ಶುದ್ಧವಾಗಿಟ್ಟುಕೊಂಡಿದ್ದೇವೆ ಎಂದು ಹೇಳಿದ್ದಾರೆ.







