ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆಗೆ 'ಸಿಟ್' ರಚನೆ

ಬೆಂಗಳೂರು, ಮಾ.10:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದ ತನಿಖೆಗಾಗಿ 'ಸಿಟ್'(ವಿಶೇಷ ತನಿಖಾ ತಂಡ) ರಚನೆ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು 'ಸಿಟ್' ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ ಎಂದರು.
ಈ ಸಂಬಂಧ ಅಧಿಕೃತ ಟಿಪ್ಪಣಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ತನಿಖೆ ನಡೆಸಿ ವರದಿ ಸಲ್ಲಿಸುವಂತೆಯೂ ಹೇಳಲಾಗಿದೆ ಎಂದು ನುಡಿದರು.
ತಮ್ಮ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು, ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವಂಥದ್ದು ಬಹಳ ಸ್ಪಷ್ಟವಾಗಿರುತ್ತದೆ ಎಂದು ಮಾ.9ರಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರ ಬರೆದು ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ, ಮಾ. 2ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಮಾಜಿ ಸಚಿವರ ಮಾನಹಾನಿ ಮಾಡಲಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕಷವಾಗಿ ವಿಚಾರಣೆ ಮಾಡಲು ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ತನಿಖೆಗೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.







