ಚುನಾವಣಾ ಆಯೋಗ ರಾಜಕೀಯ ಒತ್ತಡಕ್ಕೆ ಮಣಿದಿದೆಯೇ: ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಪ್ರಶ್ನೆ

ಬೆಳಗಾವಿ, ಮಾ.11: ತಮಿಳುನಾಡು, ಕೇರಳ, ಅಸ್ಸಾಂ ಹಾಗು ಪುದುಚೇರಿ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗವು, ಈವರೆಗೂ ನಮ್ಮ ರಾಜ್ಯದಲ್ಲಿ ಉಪ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿಲ್ಲ. ಚುನಾವಣಾ ಆಯೋಗವೇನಾದರೂ ರಾಜಕೀಯ ಒತ್ತಡಕ್ಕೆ ಮಣಿದಿದೆಯೇ? ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಪ್ರಶ್ನಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಬೇಕಿದೆ. ಉಳಿದ ರಾಜ್ಯಗಳಿಗೆ ಚುನಾವಣೆ ಘೋಷಿಸಿದ ಆಯೋಗವು, ರಾಜ್ಯದ ವಿಚಾರದಲ್ಲಿ ಯಾಕೆ ಮೌನ ತಾಳಿದೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡನೆ ಮಾಡಿದ ಬಳಿಕ ಉಪ ಚುನಾವಣೆ ಘೋಷಣೆ ಮಾಡಲು ಮುಂದಾಗಿರಬಹುದು. ಉಳಿದ ರಾಜ್ಯಗಳಿಗೆ ಚುನಾವಣೆ ಘೋಷಿಸಿದಾಗ, ಕರ್ನಾಟಕದ ವಿಚಾರದಲ್ಲಿ ಪ್ರತ್ಯೇಕ ಅಧಿಸೂಚನೆ ಹೊರಡಿಸುವ ಅಗತ್ಯವಾದರೂ ಏನಿದೆ? ಚುನಾವಣಾ ಆಯೋಗದ ಮೇಲೆ ಒತ್ತಡ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ, ರಾಜ್ಯದ ವಿಚಾರದಲ್ಲಿ ತಾಳಿರುವ ಮೌನದಿಂದ, ಚುನಾವಣಾ ಆಯೋಗವು ರಾಜಕೀಯ ಒತ್ತಡಕ್ಕೆ ಮಣಿದಿರುವ ಸಂಶಯ ವ್ಯಕ್ತವಾಗುತ್ತಿದೆ ಎಂದು ಪ್ರಕಾಶ್ ಹುಕ್ಕೇರಿ ಹೇಳಿದರು.
ಇದೇ ವೇಳೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುತ್ತದೆ ಅನ್ನೋದು ಗೊತ್ತಿಲ್ಲ. ಹೈಕಮಾಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಯಾರಿಗೆ ಟಿಕೆಟ್ ಕೊಡುತ್ತಾರೋ ಅವರ ಪರವಾಗಿ ಒಬ್ಬ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಯಾವುದೆ ಗೊಂದಲ ಇಲ್ಲ ಎಂದರು.







