ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಮಾ. 12: ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಇಂದಿಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಶುಕ್ರವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ನನ್ನ ಮೇಲಿನ ಪ್ರೀತಿಯಿಂದಾಗಿ, ನಾನು ಮುಖ್ಯಮಂತ್ರಿಯಾಗಲಿ ಎಂದು ಹೇಳಿರಬಹುದು. ಅದಕ್ಕೆ ವಿಶೇಷ ಅರ್ಥ ಕೊಡುವುದು ಬೇಡ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರೇ ಮುಂದೆಯೂ ಸಿಎಂ ಆಗಿ ಆಡಳಿತ ನಡೆಸಲಿದ್ದಾರೆಂದು ಹೈಕಮಾಂಡ್ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ವರಿಷ್ಟರೇ ಈ ಮಾತು ಹೇಳಿರುವಾಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಡಾ.ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದರು.
ಸದಾನಂದಗೌಡರು ಆಕಸ್ಮಿಕವಾಗಿ ಆ ಮಾತನ್ನು ಹೇಳಿದ್ದಾರೆ. ಅದಕ್ಕೆ ಏನೇನೊ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಯಡಿಯೂರಪ್ಪ ನಾಯಕತ್ವ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರ ಮುನ್ನೆಡೆಸುತ್ತಿದ್ದಾರೆ. ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಜನತೆ ಮೇಲೆ ಒಂದೇ ಒಂದು ಪೈಸೆ ತೆರಿಗೆಯನ್ನು ವಿಧಿಸಿಲ್ಲ. ನಮ್ಮದು ಜನಪರವಾದ ಬಜೆಟ್ ಅವರು ವಿಶ್ಲೇಷಿಸಿದರು.
ವಿರೋಧ ಪಕ್ಷ ಕಾಂಗ್ರೆಸ್ ನಾಯಕತ್ವದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಮೊದಲು ಅವರಲ್ಲಿರುವ ಭಿನ್ನಮತವನ್ನು ಸರಿಪಡಿಸಿಕೊಂಡು ಬೇರೆ ಪಕ್ಷದವರ ಬಗ್ಗೆ ಮಾತನಾಡಲಿ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಒಬ್ಬರಿಗೊಬ್ಬರಿಗೆ ಆಗುವುದಿಲ್ಲ ಎಂದು ಅಶ್ವತ್ಥ ನಾರಾಯಣ ತಿರುಗೇಟು ನೀಡಿದರು.







