ಉಡುಪಿಯ ನೂತನ ಕೌಟುಂಬಿಕ ನ್ಯಾಯಾಲಯ ಉದ್ಘಾಟನೆ

ಉಡುಪಿ, ಮಾ.13: ಬಹುಕಾಲದ ಬೇಡಿಕೆಯಾದ ಉಡುಪಿಯ ನೂತನ ಕೌಟುಂಬಿಕ ನ್ಯಾಯಾಲಯವನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ಉಡುಪಿ ನ್ಯಾಯಾಲಯದಲ್ಲಿ ನಡೆದ ಸಮಾರಂಭವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ನ್ಯಾ.ಓಕ್, ಸಾಮಾನ್ಯ ನ್ಯಾಯಾಲಯ ದಿಂದ ಕೌಟುಂಬಿಕ ನ್ಯಾಯಾಲಯಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ವರ್ಗಾವಣೆಯಾಗುತ್ತಿದೆ. ಇಲ್ಲಿ ಕಾರ್ಯನಿರ್ವಹಿಸುವ ವಕೀಲರು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಈ ಮೂಲಕ ಸ್ವಾಸ್ಥ ಸಮಾಜ ನಿರ್ಮಿಸಲು ಸಹಕಾರಿಯಾಗುತ್ತದೆ ಎಂದರು.
ಇಂದು ಸರಕಾರ ಕೌಟುಂಬಿಕ ಪ್ರಕರಣಗಳಿಗೂ ಪ್ರಾಮುಖ್ಯತೆ ನೀಡಲಾಗು ತ್ತಿದೆ. ಪ್ರಕರಣ ಇತ್ಯರ್ಥಕ್ಕೆ ಹೆಚ್ಚಿನ ಮುತುವರ್ಜಿ ವಹಿಸಲಾಗುತ್ತದೆ. ಕೌಟುಂಬಿಕ ದೌರ್ಜನ್ಯ, ಸಮಾನ ಹಕ್ಕು, ಮಹಿಳೆಗೆ ಸಂಬಂಧಿಸಿ ಪ್ರಕರಣಗಳಿಗೆ ಈ ಕೋರ್ಟಿನಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕುಟುಂಬ ಸರಿಯಾಗಿದ್ದರೆ ಸಮಾಜ ಉತ್ತಮವಾಗಿರಲು ಸಾಧ್ಯ. ಆದುದರಿಂದ ಇದರಲ್ಲಿ ವಕೀಲರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಹಾಗೂ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಮಾತನಾಡಿ, ಕೌಟುಂಬಿಕ ನ್ಯಾಯಾಲಯದಲ್ಲಿ ಕೇವಲ ನ್ಯಾಯಾಧೀಶರು ಮಾತ್ರ ನ್ಯಾಯದಾನ ಮಾಡಲು ಸಾಧ್ಯವಿಲ್ಲ. ಇದರಲ್ಲಿ ವಕೀಲರು ಮತ್ತು ಕುಟುಂಬದವರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಪ್ರಕರಣಗಳ ಇತ್ಯರ್ಥಕ್ಕೆ ವಕೀಲರು ನ್ಯಾಯಾಧೀಶರೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಮಾತನಾಡಿದರು.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣು ವರ್ಧನ್ ಉಪಸ್ಥಿತರಿದ್ದರು. ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಸುಬ್ರಹ್ಮಣ್ಯ ಜೆ.ಎನ್. ಸ್ವಾಗತಿಸಿದರು. ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ವಂದಿಸಿದರು. ಪ್ರಾಧಿಕಾರದ ಜಿಲ್ಲಾ ಕಾರ್ಯದರ್ಶಿ ಕಾವೇರಿ ಕಾರ್ಯ ಕ್ರಮ ನಿರೂಪಿಸಿದರು.







