ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ತಡೆಗೆ ಸ್ಪಷ್ಟ ನೀತಿ ಜಾರಿ: ಡಾ.ಕೆ.ಸುಧಾಕರ್

ಬೆಂಗಳೂರು, ಮಾ.15: ರಾಜ್ಯದ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಯಲ್ಲಿ ಸೀಟ್ ಬ್ಲಾಕಿಂಗ್ ದಂಧೆಯನ್ನು ತಡೆಯಲು ರಾಜ್ಯ ಸರಕಾರ ಮುಂದಿನ ವರ್ಷದಿಂದ ಸ್ಪಷ್ಟ ನೀತಿ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೈದ್ಯಕೀಯ ಕಾಲೇಜುಗಳಲ್ಲಿನ ಸೀಟ್ ಬ್ಲಾಕಿಂಗ್ ದಂಧೆ ತಡೆಗಟ್ಟುವ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿತ್ತು. ಆ ಸಮಿತಿ ವರದಿ ನೀಡಿದೆ. ಅದನ್ನು ಪರಿಶೀಲಿಸಿ ಜಾರಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ 65ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. 45 ಖಾಸಗಿ ವೈದ್ಯಕೀಯ ಕಾಲೇಜುಗಳಿದ್ದು, ಅದರಲ್ಲಿ ಕೆಲವು ವೈದ್ಯಕೀಯ ಕಾಲೇಜುಗಳು ಇಂಥ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ನಿರತವಾಗಿವೆ ಎಂದು ಹೇಳಿದರು.
ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ವೈದ್ಯಕೀಯ ಕಾಲೇಜುಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ನೋಟಿಸ್ ನೀಡಿ ತನಿಖೆ ನಡೆಸುತ್ತಿವೆ. ಹೀಗಾಗಿ, ರಾಜ್ಯ ಸರಕಾರ ಯಾವುದೇ ನೋಟಿಸ್ ನೀಡಿಲ್ಲ ಎಂದು ಹೇಳಿದರು.





